
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಹಳ್ಳಿಯೊಂದರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂವರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯನ ವಿರುದ್ಧ ಪ್ರಕರಣ ದಾಖಲಾಗಿದೆ. ಶಾಲೆಯ ಶಿಕ್ಷಕ ನಾಗರಾಜಪ್ಪ ಮೂವರು ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ನಡೆಸಿದ್ದು, ಮಕ್ಕಳ ಕೈಯಲ್ಲಿ ಮನೆಯಿಂದ ಮೊಬೈಲ್ ಫೋನ್ ತರಿಸಿಕೊಂಡು ಅವರಿಗೆ ಅಶ್ಲೀಲ ವಿಡಿಯೋಗಳು ಹಾಗೂ ಸಂದೇಶಗಳನ್ನು ಕಳುಹಿಸುತ್ತಿದ್ದ ಆರೋಪ ಕೇಳಿಬಂದಿದೆ. ಅಲ್ಲದೆ, ವಿದ್ಯಾರ್ಥಿನಿಯರು ಧರಿಸಿಕೊಂಡು ಬಂದ ಬಟ್ಟೆಗಳ ಕುರಿತು ಪ್ರಶ್ನೆಗಳನ್ನು ಕೇಳಿ, ಅವುಗಳನ್ನು ಪರಿಶೀಲಿಸುವ ನೆಪದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಇದೇ ರೀತಿಯ ಕಿರುಕುಳವನ್ನು ಮೂವರು ಅಪ್ರಾಪ್ತ ಬಾಲಕಿಯರಿಗೂ ನೀಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಮಕ್ಕಳನ್ನು ಹೆದರಿಸಿ ದೇವರ ಮೇಲೆ ಆಣೆ ಮಾಡಿಸಿಕೊಂಡಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಘಟನೆ ಕುರಿತು ಪೋಷಕರು ಶಾಲೆಯ ಮುಖ್ಯೋಪಾಧ್ಯಾಯ ಲೋಕೇಶಪ್ಪ ಅವರ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕ ನಾಗರಾಜಪ್ಪ ಹಾಗೂ ಮುಖ್ಯೋಪಾಧ್ಯಾಯ ಲೋಕೇಶಪ್ಪ ವಿರುದ್ಧ ಪ್ರಕರಣ ದಾಖಲಾಗಿದ್ದು, ಯಗಟಿ ಪೊಲೀಸ್ ಠಾಣೆಯಲ್ಲಿ ಮೂವರು ಮಕ್ಕಳಿಂದ ಪ್ರತ್ಯೇಕ ದೂರುಗಳು ದಾಖಲಾಗಿವೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



