
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆಯ ಎನ್ಸಿಡಿ ವಿಭಾಗ, ಜಿಲ್ಲಾ ಸರ್ವೇಕ್ಷಣ ಘಟಕ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಆದರ್ಶ ಆಸ್ಪತ್ರೆ ಹಾಗೂ ಪ್ರಸಾದ್ ನೇತ್ರಾಲಯದ ಸಹಯೋಗದಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಉದ್ಘಾಟಿಸಿದರು. ಇದೇ ವೇಳೆ ಸಂಘದ 2026-27ನೇ ಸಾಲಿನ ಸದಸ್ಯತ್ವ ಕಾರ್ಡ್ಗಳನ್ನು ವಿತರಿಸಲಾಯಿತು. ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್ ಮಾತನಾಡಿ, ಒತ್ತಡದ ವೃತ್ತಿ ಜೀವನದಲ್ಲಿರುವ ಪತ್ರಕರ್ತರು ಪ್ರತಿದಿನ ಕನಿಷ್ಠ 45 ನಿಮಿಷ ವ್ಯಾಯಾಮ ಅಥವಾ ವಾಕಿಂಗ್ಗೆ ಮೀಸಲಿಟ್ಟು ಆರೋಗ್ಯ ಕಾಪಾಡಿಕೊಳ್ಳಬೇಕು ಹಾಗೂ ಪ್ರತಿ ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ವಾರ್ತಾಧಿಕಾರಿ ಮಂಜುನಾಥ್ ಮಾತನಾಡಿದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ವಹಿಸಿದ್ದರು. ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್ ಹಾಗೂ ಜಿಲ್ಲಾ ಕೋಶಾಧಿಕಾರಿ ಹರೀಶ್ ಕುಂದರ್ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿ ವಂದಿಸಿದರು. ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ಮಧುಮೇಹ, ರಕ್ತದೊತ್ತಡ, ಇಸಿಜಿ, ಹಿಮೋಗ್ಲೋಬಿನ್, ಕೊಲೆಸ್ಟ್ರಾಲ್ ಹಾಗೂ ಕಣ್ಣಿನ ಪರೀಕ್ಷೆಗಳನ್ನು ನಡೆಸಲಾಗಿದ್ದು, ಅಸಾಂಕ್ರಮಿಕ ರೋಗಗಳ ತಡೆ, ಜೀವನಶೈಲಿ ಬದಲಾವಣೆ, ಫಿಸಿಯೋಥೆರಪಿ ಹಾಗೂ ತಂಬಾಕು ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಲಾಯಿತು. ಶಿಬಿರದಲ್ಲಿ 100ಕ್ಕೂ ಅಧಿಕ ಪತ್ರಕರ್ತರು ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.




