ಕಾರ್ಕಳ: ತಾಲೂಕಿನ ಸಾಣೂರು ಗ್ರಾಮದ ಪಿಲಿಕಲ್ಲು ಪ್ರದೇಶದಲ್ಲಿ ಜೂನ್ 24ರಂದು ರಾತ್ರಿ ಸುಮಾರು 8 ಗಂಟೆಯ ವೇಳೆಗೆ ರಸ್ತೆಯಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಪಿಲಿಕಲ್ಲು ನಿವಾಸಿ ಸಂದೀಪ್ ಪೂಜಾರಿ ಅವರು ಕಾರ್ಕಳ ಪೇಟೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿ ಚಿರತೆಯೊಂದು ಓಡಾಡುತ್ತಿರುವುದನ್ನು ಗಮನಿಸಿದ್ದು, ಅದರ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಇದೀಗ ಸ್ಥಳೀಯರಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಚಿರತೆ ಕಾಣಿಸಿಕೊಂಡ ಸ್ಥಳದಿಂದ ಸ್ವಲ್ಪ ದೂರದಲ್ಲೇ ಶಿಕ್ಷಣ ಸಂಸ್ಥೆಯಿದ್ದು, ಪ್ರತಿದಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಚರಿಸುವ ಪ್ರದೇಶವಾಗಿರುವುದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ. ಯಾವುದೇ ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಚಿರತೆಯನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಮರಳಿಸುವ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
