
ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಹೋಬಳಿಯ ಕಾಕನೂರು ಗ್ರಾಮದಲ್ಲಿರುವ ಕಿತ್ತೂರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಭಾರಿ ಪ್ರಾಂಶುಪಾಲರ ವಿರುದ್ಧ ಸಾರ್ವಜನಿಕರು ಹಾಗೂ ಪೋಷಕರಿಂದ ಅಸಮಾಧಾನ ವ್ಯಕ್ತವಾಗಿದೆ. ಬಡ ಹಾಗೂ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವ ಉದ್ದೇಶದಿಂದ ಸರ್ಕಾರ ಆರಂಭಿಸಿರುವ ಈ ವಸತಿ ಶಾಲೆಯಲ್ಲಿ ಹಲವು ವರ್ಷಗಳಿಂದ ಪ್ರಭಾರಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಭು ಅವರು ವಿದ್ಯಾರ್ಥಿಗಳಿಗೆ ಸಮರ್ಪಕ ಸೌಲಭ್ಯ ಕಲ್ಪಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ವಿದ್ಯಾರ್ಥಿಗಳ ದಾಖಲಾತಿಗೆ ಸಂಬಂಧಿಸಿದಂತೆ ಶಾಸಕರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ನೀಡಿದ ಶಿಫಾರಸು ಪತ್ರಗಳಿಗೂ ಸ್ಪಂದಿಸದೆ ಪ್ರವೇಶ ನಿರಾಕರಿಸುತ್ತಿದ್ದಾರೆ ಎನ್ನಲಾಗಿದೆ. ವಿಶೇಷವಾಗಿ ಎಸ್ಸಿ/ಎಸ್ಟಿ ವರ್ಗದ ವಿದ್ಯಾರ್ಥಿಗಳು ದಾಖಲಾತಿಗಾಗಿ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲೂ ದಾಖಲಾತಿ ನೀಡಲು ನಿರಾಕರಿಸಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಸರ್ಕಾರದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಪ್ರಭಾರಿ ಪ್ರಾಂಶುಪಾಲರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಂಡು ಅವರನ್ನು ಬೇರೆಡೆ ವರ್ಗಾವಣೆ ಮಾಡಬೇಕು ಎಂದು ಸಾರ್ವಜನಿಕ ವಲಯದಲ್ಲಿ ಒತ್ತಾಯ ವ್ಯಕ್ತವಾಗಿದೆ.
ವರದಿ: ಕುಳೇನೂರು ಅರುಣ್ ಕುಮಾರ್ ಎ ಚನ್ನಗಿರಿ.




