
ಕಾರ್ಕಳ: ಕಾರ್ಕಳದ ನಿರುದ್ಯೋಗಿ ಯುವಜನತೆಗೆ ಮತ್ತೊಂದು ಸುವರ್ಣಾವಕಾಶ ದೊರೆತಿದೆ. ವಿಕಾಸ ಸೇವಾ ಸಂಸ್ಥೆಯ ನೇತೃತ್ವದಲ್ಲಿ ಜುಲೈ 9ರಂದು ಕಾರ್ಕಳದಲ್ಲಿ ‘ವಿಕಾಸ ಉದ್ಯೋಗ ಸೇತು’ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಈ ಕುರಿತು ವಿಕಾಸ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾಸಕ ವಿ. ಸುನೀಲ್ ಕುಮಾರ್ ಮಾಹಿತಿ ನೀಡಿದರು. ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಐದು-ಆರು ವರ್ಷಗಳ ಹಿಂದೆ ಕಾರ್ಕಳದಲ್ಲಿ ಇದೇ ಮಾದರಿಯ ಉದ್ಯೋಗ ಮೇಳಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಆಗ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ ಸುಮಾರು 500ಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಉದ್ಯೋಗ ದೊರಕುವಂತೆ ವಿಕಾಸ ಸೇವಾ ಸಂಸ್ಥೆ ನೆರವಾಗಿತ್ತು. ಈ ಬಾರಿ ಉದ್ಯೋಗ ಮೇಳವನ್ನು ಇನ್ನಷ್ಟು ವಿಭಿನ್ನವಾಗಿ ಹಾಗೂ ಪರಿಣಾಮಕಾರಿಯಾಗಿ ರೂಪಿಸಲಾಗಿದ್ದು, ದೇಶದ ವಿವಿಧ ಕ್ಷೇತ್ರಗಳ 20ಕ್ಕೂ ಹೆಚ್ಚು ಪ್ರಮುಖ ಕಂಪನಿಗಳು ಭಾಗವಹಿಸಲಿವೆ. ಕಂಪನಿಗಳು ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಸ್ಥಳದಲ್ಲೇ ಆಯ್ಕೆ ಮಾಡಲಿದ್ದು, ಕನಿಷ್ಠ 400ಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ ಎಂದು ಶಾಸಕರು ತಿಳಿಸಿದರು. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ ಹಾಗೂ ಪಾಲಿಟೆಕ್ನಿಕ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ. ಆಯ್ಕೆ ಪ್ರಕ್ರಿಯೆಯನ್ನು ಸುಗಮವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಕೇವಲ 1,000 ಅರ್ಜಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಮೊದಲು ನೋಂದಣಿ ಮಾಡುವ 1,000 ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ 9ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನೇರ ಸಂದರ್ಶನಗಳು ನಡೆಯಲಿದ್ದು, ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಆಧಾರ್ ಕಾರ್ಡ್, ಬಯೋಡೇಟಾ ಸೇರಿದಂತೆ ಅಗತ್ಯವಿರುವ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಜರಾಗಬೇಕು. ಇದೇ ಸಂದರ್ಭದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ಎಂಎನ್ಸಿ ಕಂಪನಿಗಳ ಸಹಯೋಗದಲ್ಲಿ ಉಚಿತ ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕರು ತಿಳಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕಿನ ನಿರುದ್ಯೋಗಿ ಯುವಜನತೆ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ತಮ್ಮ ಭವಿಷ್ಯ ರೂಪಿಸಿಕೊಳ್ಳುವಂತೆ ಅವರು ಮನವಿ ಮಾಡಿದರು. ಕಳೆದ ವರ್ಷಗಳ ಯಶಸ್ಸನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯೂ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದ್ದು, ಕಾರ್ಕಳ ಹಾಗೂ ಸುತ್ತಮುತ್ತಲಿನ ಯುವಜನರಿಗೆ ಈ ಉದ್ಯೋಗ ಮೇಳ ಹೊಸ ಆಶಾಕಿರಣವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ವರದಿ: ಅರುಣ್ ಭಟ್ ಕಾರ್ಕಳ




