
ಮೂಡಿಗೆರೆ: ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ನಡುವೆಯೇ ಮೂಗ್ರಹಳ್ಳಿ ಗ್ರಾಮದ ಹೇಮಾವತಿ ನದಿ ಸೇತುವೆಯ ತಡೆಗೋಡೆ ನಿರ್ಮಾಣ ಕಾಮಗಾರಿ ತರಾತುರಿಯಲ್ಲಿ ನಡೆಯುತ್ತಿದ್ದು, ಸುರಕ್ಷತಾ ಕ್ರಮಗಳನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಾಮಗಾರಿ ಸಲುವಾಗಿ ಮುಖ್ಯ ರಸ್ತೆಯ ಪಕ್ಕದಲ್ಲೇ ಸುಮಾರು 20 ಅಡಿ ಆಳದ ಗುಂಡಿಗಳನ್ನು ತೋಡಲಾಗಿದ್ದು, ಅಪಾಯವನ್ನು ತಡೆಯಲು ಅಗತ್ಯವಾದ ಬ್ಯಾರಿಕೇಡ್ಗಳು, ಎಚ್ಚರಿಕೆ ಫಲಕಗಳು ಹಾಗೂ ಇತರೆ ಸುರಕ್ಷತಾ ವ್ಯವಸ್ಥೆಗಳನ್ನು ಅಳವಡಿಸಿಲ್ಲ ಎಂದು ದೂರಿದ್ದಾರೆ. ಇದರಿಂದ ವಾಹನ ಸವಾರರು, ಪಾದಚಾರಿಗಳು ಹಾಗೂ ಜಾನುವಾರುಗಳು ಗುಂಡಿಗೆ ಬಿದ್ದು ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿದ್ದು, ಜೀವಹಾನಿಯ ಭೀತಿಯೂ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಭಾರೀ ಮಳೆಯ ಸಂದರ್ಭದಲ್ಲಿ ಇಂತಹ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿರುವ ಗ್ರಾಮಸ್ಥರು, ಕಾಮಗಾರಿಯ ಗುಣಮಟ್ಟ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಪರಿಗಣಿಸಿ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದರ ಜೊತೆಗೆ ಕಾಮಗಾರಿ ಸ್ಥಳದಲ್ಲಿ ಕಡ್ಡಾಯವಾಗಿ ಬ್ಯಾರಿಕೇಡ್ಗಳು, ಎಚ್ಚರಿಕೆ ಫಲಕಗಳು ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ತಕ್ಷಣವೇ ಅಳವಡಿಸಬೇಕು ಎಂದು ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.




