
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿ ಎರಡು ದಿನಗಳು ಕಳೆದರೂ ಸಚಿವರ ಖಾತೆ ಹಂಚಿಕೆ ಇನ್ನೂ ಅಂತಿಮಗೊಂಡಿಲ್ಲ. ಪ್ರಮುಖ ಖಾತೆಗಳಿಗಾಗಿ ಸಚಿವರ ನಡುವೆ ತೀವ್ರ ಲಾಬಿ ನಡೆಯುತ್ತಿದ್ದು, ವಿಶೇಷವಾಗಿ ಸಮಾಜ ಕಲ್ಯಾಣ ಇಲಾಖೆಯ ಖಾತೆಗಾಗಿ ಪೈಪೋಟಿ ಹೆಚ್ಚಾಗಿದೆ. ಆಹಾರ ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ತಮ್ಮ ಹಾಲಿ ಖಾತೆಯನ್ನು ಬದಲಿಸಿ ಸಮಾಜ ಕಲ್ಯಾಣ ಇಲಾಖೆಯ ಜವಾಬ್ದಾರಿಯನ್ನು ಪಡೆಯಲು ಹೈಕಮಾಂಡ್ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಇದೇ ಖಾತೆಯ ಮೇಲೆ ನೂತನ ಸಚಿವ ಪಿ.ಎಂ. ನರೇಂದ್ರ ಸ್ವಾಮಿ ಹಾಗೂ ಮಾಜಿ ಸಚಿವ ಶಿವರಾಜ್ ತಂಗಡಗಿ ಅವರೂ ಕಣ್ಣಿಟ್ಟಿದ್ದು, ತಮ್ಮ ಪರವಾಗಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಖಾತೆ ಹಂಚಿಕೆ ಕುರಿತು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಬೇಕಿದ್ದು, ಯಾರಿಗೆ ಯಾವ ಖಾತೆ ಸಿಗಲಿದೆ ಎಂಬುದರ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮನೆಮಾಡಿದೆ.




