
ಬೆಂಗಳೂರು: ಕರ್ನಾಟಕ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ರೋಣ ಕ್ಷೇತ್ರದ ಶಾಸಕ ಗುರುಪಾದಗೌಡ ಸಂಗನಗೌಡ ಪಾಟೀಲ್ (ಜಿ.ಎಸ್. ಪಾಟೀಲ್) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿ.ಎಸ್. ಪಾಟೀಲ್ ಅವರ ಹೆಸರನ್ನು ಸಭಾಧ್ಯಕ್ಷ ಸ್ಥಾನಕ್ಕೆ ಸೂಚಿಸಿದರೆ, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಅನುಮೋದಿಸಿದರು. ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹಾಗೂ ವಿರೋಧಪಕ್ಷದ ನಾಯಕ ಆರ್. ಅಶೋಕ್ ಅವರು ನೂತನ ಸಭಾಧ್ಯಕ್ಷರನ್ನು ಪೀಠಕ್ಕೆ ಕರೆತಂದರು. ಈ ವೇಳೆ ಸದನದ ಸದಸ್ಯರು ಜಿ.ಎಸ್. ಪಾಟೀಲ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಕೃಷಿ ಹಿನ್ನೆಲೆಯ ಕುಟುಂಬದಿಂದ ಬಂದಿರುವ ಜಿ.ಎಸ್. ಪಾಟೀಲ್ ಅವರು ರಾಜಕೀಯದಲ್ಲಿ ಸುದೀರ್ಘ ಅನುಭವ ಹೊಂದಿದ್ದಾರೆ. ಎಂಟು ಬಾರಿ ಚುನಾವಣೆಗೆ ಸ್ಪರ್ಧಿಸಿರುವ ಅವರು ನಾಲ್ಕು ಬಾರಿ ಗೆಲುವು ಸಾಧಿಸಿದ್ದಾರೆ. ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ಎರಡರಲ್ಲೂ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವುದು ಅವರ ಪ್ರಮುಖ ರಾಜಕೀಯ ಹಿನ್ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸದನದಲ್ಲಿ ಪ್ರಸ್ತಾಪಿಸಿದರು. ಜಿ.ಎಸ್. ಪಾಟೀಲ್ ಅವರ ಆಯ್ಕೆಗೆ ಎಐಸಿಸಿಯೂ ಅನುಮೋದನೆ ನೀಡಿದ್ದು, ಇದೀಗ ಅವರು ಕರ್ನಾಟಕ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.




