ಕಾರ್ಕಳ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶುಭದರಾವ್, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಹಿಂದು ಸಂಘಟನೆಗಳು ಶುದ್ಧೀಕರಣ ನಡೆಸಿರುವುದು ಖಂಡನೀಯ ಎಂದು ಹೇಳಿದರು. ದೇಶವು 80ನೇ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸುತ್ತಿದ್ದರೂ ಇಂದಿಗೂ ಅಸ್ಪೃಶ್ಯತೆ ಆಚರಣೆಯಲ್ಲಿರುವುದು ಆಘಾತಕಾರಿ. ಸ್ವಾತಂತ್ರ್ಯ ಸಂಗ್ರಾಮದ ಮಾದರಿಯಲ್ಲಿ ಅಸ್ಪೃಶ್ಯತೆಯ ವಿರುದ್ಧವೂ ದೇಶದಲ್ಲಿ ಮತ್ತೊಮ್ಮೆ ಹೋರಾಟ ನಡೆಸುವ ಅನಿವಾರ್ಯತೆ ಇದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೇ ಇಂತಹ ಪರಿಸ್ಥಿತಿ ಎದುರಾದರೆ, ಸಾಮಾನ್ಯ ದಲಿತ ಬಂಧುಗಳ ಪರಿಸ್ಥಿತಿ ಹೇಗಿರಬಹುದು ಎಂದು ಆತಂಕ ವ್ಯಕ್ತಪಡಿಸಿದ ಅವರು, ಈ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಅಸ್ಪೃಶ್ಯತೆಯ ವಿರುದ್ಧ ಹೋರಾಟ ಕೈಗೊಳ್ಳುವ ಸಂಕಲ್ಪವನ್ನು ಎಲ್ಲರೂ ದೃಢ ಮನಸ್ಸಿನಿಂದ ಮಾಡಬೇಕು ಎಂದು ಕರೆ ನೀಡಿದರು. ಧ್ವಜಾರೋಹಣ ನೆರವೇರಿಸಿದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ನ್ಯಾಯವಾದಿ ಶೇಖರ ಮಡಿವಾಳ ಮಾತನಾಡಿ, ‘ಬೇಟಿ ಬಚಾವೋ, ಬೇಟಿ ಪಡಾವೋ’ ಎಂದು ಕರೆ ನೀಡುವ ಪ್ರಧಾನಿ ನರೇಂದ್ರ ಮೋದಿ ಅವರು ನೀಟ್ ಅಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸಿರುವುದು ಸರಿಯೇ ಎಂದು ಪ್ರಶ್ನಿಸಿದರು. ಘೋಷಣೆಗಳು ಕೇವಲ ನಾಲಿಗೆಯಿಂದ ಹೊರಬರದೆ ಹೃದಯದಿಂದ ಹೊರಹೊಮ್ಮಿದಾಗ ಮಾತ್ರ ದೇಶದ ಪ್ರಜೆಗಳ ನೋವು-ನಲಿವು ಅರ್ಥಮಾಡಿಕೊಳ್ಳಲು ಸಾಧ್ಯ ಎಂದರು. ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್ ನಕ್ರೆ ಮಾತನಾಡಿ, ಬ್ರಿಟಿಷರು ಕೊಳ್ಳೆ ಹೊಡೆದು ಹೋದ ಭಾರತವನ್ನು ಸಶಕ್ತವಾಗಿ ಜಗತ್ತಿನ ಮುಂದೆ ಕಟ್ಟಿಬೆಳೆಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು ಎಂದರು. ರಾಜ್ಯ ಸರ್ಕಾರದ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವು ಭಾರತ ಕಂಡ ಅತ್ಯಂತ ಕಳಪೆ ಆಡಳಿತ ಎಂದು ಟೀಕಿಸಿದರು. ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಹಾಗೂ ಉಸ್ತುವಾರಿ ಭರತ್ ಮುಂಡೋಡಿ ಸಂದರ್ಭೋಚಿತವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಸುಧಾಕರ ಕೋಟ್ಯಾನ್, ಬ್ಲಾಕ್ ಉಪಾಧ್ಯಕ್ಷ ಜಾರ್ಜ್ ಕ್ಯಾಸ್ಟಲಿನೊ, ರಾಜ್ಯ ಕಿಸಾನ್ ಘಟಕದ ಪ್ರಧಾನ ಕಾರ್ಯದರ್ಶಿ ಉದಯ ಶೆಟ್ಟಿ ಕುಕ್ಕುಂದೂರು, ಹಿರ್ಗಾನ ಸೊಸೈಟಿ ಅಧ್ಯಕ್ಷ ಸಿರಿಯಣ್ಣ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ ನಕ್ರೆ, ಸೇವಾದಳದ ಅಬ್ದುಲ್ ಸಾಣೂರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಬಾಸ್ಕರ ಪೂಜಾರಿ, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ದೇವಾಡಿಗ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ಡಿಸೋಜ, ಪ್ರಚಾರ ಸಮಿತಿಯ ಅನಿಲ್ ಪೂಜಾರಿ ಮಾಳ ಹಾಗೂ ಎಸ್ಸಿ ಘಟಕದ ಅಧ್ಯಕ್ಷ ದೇವದಾಸ್ ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಸ್.ಐ.ಆರ್. ಪ್ರಕ್ರಿಯೆಯಲ್ಲಿ ಶ್ರಮಿಸಿದ ಬಿಎಲ್ಎ-2ಗಳಿಗೆ ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ವಿವಿಧ ಘಟಕಗಳ ಅಧ್ಯಕ್ಷರು, ಚುನಾಯಿತ ಜನಪ್ರತಿನಿಧಿಗಳು, ನಾಮನಿರ್ದೇಶಿತ ಸದಸ್ಯರು, ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಬ್ಲಾಕ್ ಪದಾಧಿಕಾರಿಗಳು ಸೇರಿದಂತೆ ಹಲವರು ಸಭೆಯಲ್ಲಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿಹಾನ್ ಮೊಲೋಡಿಸ್ ತಂಡದಿಂದ ದೇಶಭಕ್ತಿ ಗೀತೆಗಳ ಕಾರ್ಯಕ್ರಮ ನಡೆಯಿತು. ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶೇಕ್ ಶಭೀರ್ ಮಿಯ್ಯಾರು ವಂದನಾರ್ಪಣೆ ಸಲ್ಲಿಸಿದರು. ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿದರು.
