
ಮೂಡಿಗೆರೆ: ಮೂಡಿಗೆರೆ ತಾಲೂಕಿನ ತರುವೆ ಗ್ರಾಮ ಪಂಚಾಯಿತಿಯಲ್ಲಿ ಲಕ್ಷಾಂತರ ರೂಪಾಯಿ ಹಣಕಾಸು ದುರುಪಯೋಗ ನಡೆದಿದೆ ಎಂದು ಆರೋಪಿಸಿ ಗ್ರಾಮಸ್ಥರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಚುನಾಯಿತ ಜನಪ್ರತಿನಿಧಿಗಳು ಸೇರಿ ಅಕ್ರಮ ಎಸಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಜೂನ್ 24ರಂದು ದೂರು ಸಲ್ಲಿಸಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮೃತ ಗ್ರಾಮ ಪಂಚಾಯಿತಿ ಯೋಜನೆಯಡಿ ಮಂಜೂರಾಗಿದ್ದ 8 ಲಕ್ಷ ರೂಪಾಯಿ ಅನುದಾನದಲ್ಲಿ ಸೋಲಾರ್ ಬೀದಿ ದೀಪಗಳನ್ನು ಅಳವಡಿಸುವಾಗ ನಿಯಮಾನುಸಾರ ಟೆಂಡರ್ ಕರೆಯಲಾಗಿಲ್ಲ ಎಂಬುದು ಪ್ರಮುಖ ಆರೋಪವಾಗಿದೆ. ಇಂಜಿನಿಯರ್ ಹಾಗೂ ತಾಲೂಕು ಪಂಚಾಯಿತಿ ಲೆಕ್ಕಾಧಿಕಾರಿಗಳ ಅನುಮೋದನೆಯೂ ಪಡೆಯದೆ ಕಳಪೆ ಗುಣಮಟ್ಟದ ಸೋಲಾರ್ ದೀಪಗಳನ್ನು ಅಳವಡಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇನ್ನು ಪಂಚಾಯಿತಿ ವ್ಯಾಪ್ತಿಯಲ್ಲಿರುವ ಖಾಸಗಿ ರೆಸಾರ್ಟ್ಗಳಿಗೆ ನಿಯಮಾನುಸಾರ ಕಂದಾಯ ವಿಧಿಸದೆ ತೆರಿಗೆ ವಿನಾಯಿತಿ ನೀಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಆರ್ಟಿಐ ಮೂಲಕ ಪಡೆದ ಮಾಹಿತಿಯಲ್ಲಿ ರೆಸಾರ್ಟ್ಗಳಿಗೆ ತೆರಿಗೆ ವಿಧಿಸಿಲ್ಲ ಎಂಬ ಉತ್ತರ ಬಂದಿದ್ದು, ಇದರಿಂದ ಪಂಚಾಯಿತಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ‘ಇ-ಸ್ವತ್ತು’ ದಾಖಲೆ ನೀಡಲು ಸಾರ್ವಜನಿಕರಿಂದ ಸಾವಿರಾರು ರೂಪಾಯಿ ಅಕ್ರಮವಾಗಿ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಇದರ ಜೊತೆಗೆ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ನೈರ್ಮಲ್ಯ ವ್ಯವಸ್ಥೆಯ ನಿರ್ವಹಣೆಯಲ್ಲಿಯೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಿಂಚನಾ ಅವರನ್ನು ವರ್ಗಾವಣೆ ಮಾಡಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಟೆಂಡರ್ ಪ್ರಕ್ರಿಯೆಯನ್ನು ತಡೆಹಿಡಿದು, ಕಾಮಗಾರಿ ಹಾಗೂ ಪಂಚಾಯಿತಿ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಬೇಕು. ತಪ್ಪಿತಸ್ಥರಿಂದ ನಷ್ಟದ ಹಣವನ್ನು ವಸೂಲಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವರದಿ: ಸಂತೋಷ್ ಅತ್ತಿಗೆರೆ




