
ಚಿಕ್ಕಮಗಳೂರು: ಅಜ್ಜಂಪುರ ಪಟ್ಟಣದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವಾಹನವನ್ನು ತಾಲೂಕು ಆಡಳಿತ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಅಜ್ಜಂಪುರ ಪಟ್ಟಣದ ಟಿಬಿ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಸಾಗುತ್ತಿದ್ದ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ, 50 ಕೆಜಿ ತೂಕದ ಒಟ್ಟು 90 ಚೀಲ ಪಡಿತರ ಅಕ್ಕಿ ಪತ್ತೆಯಾಗಿದೆ. ಸುಮಾರು ಆರೂವರೆ ಕ್ವಿಂಟಾಲ್ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಸೀಜ್ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ರಬ್ಬಿ ಎಂಬ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡಿರುವ ಆರೋಪದಡಿ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ವರದಿ: ಸಂತೋಷ್ ಅತ್ತಿಗೆರೆ




