
ಬೆಂಗಳೂರು: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡುಬರುತ್ತಿರುವ ನಡುವೆಯೇ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಮುಂದಿನ ಕೆಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 25ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟೆಂಬರ್ 26ರಂದು ಕೂಡ ಕರಾವಳಿಯ ಕೆಲವೆಡೆ ಮಳೆ ಮುಂದುವರಿಯಲಿದೆ. ಇನ್ನು ಹಾವೇರಿ, ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು–ಮಿಂಚು ಸಹಿತ ಮಳೆ ಸಂಭವಿಸುವ ನಿರೀಕ್ಷೆಯಿದ್ದು, ಕರಾವಳಿ ಮತ್ತು ಮಲೆನಾಡು ಭಾಗದ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.




