
ಕೊಳ್ಳೇಗಾಲ: 72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಚಾಮರಾಜನಗರ ವನ್ಯಜೀವಿ ವಲಯದ ವತಿಯಿಂದ ಕುರುಬನಕಟ್ಟೆಯಿಂದ ಜಕ್ಕಳ್ಳಿವರೆಗೆ ಪ್ಲಾಸ್ಟಿಕ್ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ರಸ್ತೆ ಬದಿಗಳಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲ್ ಸೇರಿದಂತೆ ಸುಮಾರು 10 ಮೂಟೆಯಷ್ಟು ತ್ಯಾಜ್ಯವನ್ನು ಸಂಗ್ರಹಿಸಲಾಯಿತು. ಇದೇ ವೇಳೆ ರೋಟರಿ ಮಿಡ್ ಟೌನ್ ಕೊಳ್ಳೇಗಾಲ ವತಿಯಿಂದ ನೀಡಲಾದ ಎರಡು ಬಾಟಲ್ ಕಲೆಕ್ಷನ್ ಬಿನ್ಗಳನ್ನು ರಸ್ತೆ ಬದಿಯಲ್ಲಿ ಅಳವಡಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ರೋಟರಿ ಮಿಡ್ ಟೌನ್ ಅಧ್ಯಕ್ಷ ಚೇತನ್ ಕುಮಾರ್, ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಿ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು. ಸ್ಥಳೀಯ ರೈತ ಸಂಘದ ಅಧ್ಯಕ್ಷ ಸಾಲೋಮನ್ ಮಾತನಾಡಿ, ರಸ್ತೆ ಬದಿ ಹಾಗೂ ಅರಣ್ಯ ಪ್ರದೇಶದ ಸಮೀಪ ಪ್ಲಾಸ್ಟಿಕ್ ಬಾಟಲ್ಗಳನ್ನು ಎಸೆಯದಂತೆ ಹಾಗೂ ಮದ್ಯಪಾನ ಮಾಡದಂತೆ ಮನವಿ ಮಾಡಿದರು. ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಅರಣ್ಯ ಮತ್ತು ವನ್ಯಜೀವಿಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ಮುರಾರ್ಜಿ ದೇಸಾಯಿ ವಸತಿ ಶಾಲೆಯ ಸಿಬ್ಬಂದಿ, ಸ್ಥಳೀಯರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.




