
ಕೊಪ್ಪ: ರಸ್ತೆ ಸಮಸ್ಯೆಯಿಂದ ಬೇಸತ್ತ ಗ್ರಾಮಸ್ಥರು ಇದೀಗ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ. ಕೊಪ್ಪ ತಾಲೂಕಿನ ಮೇಗುಂದ ಹೋಬಳಿಯ ಅತ್ತಿಕೊಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸರೀಕಟ್ಟೆ ಸಮೀಪದ ಮೇರುತಿ ಬಡಾವಣೆಯಲ್ಲಿ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಗ್ರಾಮಸ್ಥರು ಬ್ಯಾನರ್ ಅಳವಡಿಸುವ ಮೂಲಕ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ರಸ್ತೆ ಮಾಡಿದರೆ ಮಾತ್ರ ಮತ, ಇಲ್ಲದಿದ್ದರೆ ನಮ್ಮೂರಿಗೆ ಯಾವುದೇ ರಾಜಕೀಯ ಪಕ್ಷಕ್ಕೂ ಪ್ರವೇಶವಿಲ್ಲ. ರಸ್ತೆ ಮಾಡಿದವರಿಗೆ ನಮ್ಮ ಮತ” ಎಂಬ ಸಂದೇಶದೊಂದಿಗೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಮೇರುತಿ ಬಡಾವಣೆಯಲ್ಲಿ 60ಕ್ಕೂ ಹೆಚ್ಚು ಮನೆಗಳಿದ್ದು, ಕಳೆದ ಹಲವು ವರ್ಷಗಳಿಂದ ಸಮರ್ಪಕ ರಸ್ತೆ ಸೌಲಭ್ಯವಿಲ್ಲದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಮಳೆಗಾಲದಲ್ಲಿ ರಸ್ತೆಯಲ್ಲೇ ನೀರು ಹರಿದು ಹೊಂಡಗುಂಡಿಗಳು ನಿರ್ಮಾಣವಾಗುತ್ತಿದ್ದು, ಸಂಚಾರ ದುಸ್ತರವಾಗಿದೆ. ಹಲವು ಬಾರಿ ರಸ್ತೆ ಅಭಿವೃದ್ಧಿಗೆ ಮನವಿ ಸಲ್ಲಿಸಿದರೂ ಅಧಿಕಾರಿಗಳಿಂದ ಭರವಸೆ ಮಾತ್ರ ಸಿಗುತ್ತಿದ್ದು, ಕಾಮಗಾರಿ ಆರಂಭವಾಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಒಗ್ಗಟ್ಟಾಗಿ ಚುನಾವಣೆ ಬಹಿಷ್ಕಾರದ ನಿರ್ಧಾರ ಕೈಗೊಂಡಿದ್ದಾರೆ. ಇನ್ನು ಅತ್ತಿಕೊಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲು, ಬೆಂಡೆಹಕ್ಲು, ಕವನಳ್ಳ, ಹೊನ್ನಗುಂಡಿ, ನೆಫಾ, ಅಣಕಲುಮಕ್ಕಿ, ಕಲ್ಲುಗುಡ್ಡೆ ಹಾಗೂ ದೊಡ್ಡಬಿಳಾಲು ರಸ್ತೆಗಳ ಸ್ಥಿತಿಯೂ ಶೋಚನೀಯವಾಗಿದೆ. ಗ್ರಾಮಸ್ಥರೇ ಮಣ್ಣು ಹಾಕಿ ರಸ್ತೆ ಗುಂಡಿಗಳನ್ನು ಮುಚ್ಚಿಕೊಂಡು ಸಂಚಾರಕ್ಕೆ ಅನುಕೂಲ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಟ್ಟಿನಲ್ಲಿ, ಚುನಾವಣೆ ಸಂದರ್ಭದಲ್ಲಿ ಮಾತ್ರ ಮತ ಕೇಳಲು ಬರುವ ರಾಜಕೀಯ ನಾಯಕರು, ವರ್ಷಗಳಿಂದ ಕಾಡುತ್ತಿರುವ ರಸ್ತೆ ಸಮಸ್ಯೆಗೆ ಯಾವಾಗ ಪರಿಹಾರ ಕಲ್ಪಿಸುತ್ತಾರೆ ಎಂಬುದು ಗ್ರಾಮಸ್ಥರ ಪ್ರಶ್ನೆಯಾಗಿದೆ.





