
ಕಾರ್ಕಳ: ಕರಾವಳಿಯಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಕಳ ವಕೀಲರ ಸಂಘದ ವತಿಯಿಂದ ನಡೆಯುತ್ತಿರುವ ಪ್ರಯತ್ನಕ್ಕೆ ಸಂಪೂರ್ಣ ಬೆಂಬಲವಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ತಿಳಿಸಿದ್ದಾರೆ. ಈ ಬೇಡಿಕೆ ಕೇವಲ ವಕೀಲರಿಗೆ ಮಾತ್ರ ಸೀಮಿತವಾಗಿರದೆ ಸಮಸ್ತ ಕರಾವಳಿ ಜನತೆಗೆ ಸಹಕಾರಿಯಾಗುವ ಮಹತ್ವದ ವಿಚಾರವಾಗಿದೆ. ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾದಲ್ಲಿ ಈ ಭಾಗದ ಜನರು ನ್ಯಾಯಕ್ಕಾಗಿ ಬೆಂಗಳೂರಿಗೆ ಅಲೆದಾಡುವ ಅನಿವಾರ್ಯತೆ ತಪ್ಪಲಿದ್ದು, ಸಮಯದ ಉಳಿತಾಯದ ಜೊತೆಗೆ ನ್ಯಾಯಾಲಯದ ಕಲಾಪಗಳಿಗೆ ಸಂಬಂಧಿಸಿದ ಪ್ರಯಾಣ ವೆಚ್ಚವೂ ಗಣನೀಯವಾಗಿ ಕಡಿಮೆಯಾಗಲಿದೆ. ಈ ಮಹತ್ವದ ಬೇಡಿಕೆಗೆ ಬಲ ತುಂಬುವ ಉದ್ದೇಶದಿಂದ ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ಕಾರ್ಕಳ ವಕೀಲರ ಸಂಘದ ವತಿಯಿಂದ ದಿನಾಂಕ 14ರ ಶನಿವಾರ ಬೆಳಿಗ್ಗೆ 10:30ಕ್ಕೆ ಪ್ರಕಾಶ್ ಹೋಟೆಲ್ ಸಭಾಂಗಣದಲ್ಲಿ ಹಕ್ಕೊತ್ತಾಯ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯಲ್ಲಿ ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ತಮ್ಮ ಸಲಹೆ ಮತ್ತು ಸೂಚನೆಗಳನ್ನು ನೀಡುವಂತೆ ಶುಭದರಾವ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.





