ಕೊಪ್ಪ: ಮಲೆನಾಡಿನಲ್ಲಿ ಚುನಾವಣೆ ಬಹಿಷ್ಕಾರದ ಕೂಗು ಮುಂದುವರೆದಿದ್ದು, ಕೊಪ್ಪ ತಾಲೂಕಿನ ಮೇಗುಂದ ಹೋಬಳಿಯ ಅತ್ತಿಕೊಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನಗುಂಡಿ ಗ್ರಾಮದ ನೇಫಾ ಗ್ರಾಮಸ್ಥರು ರಸ್ತೆ ದುರಸ್ತಿಗೆ ಆಗ್ರಹಿಸಿ ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. “ರಸ್ತೆ ದುರಸ್ತಿ ಮಾಡಿದರೆ ಮಾತ್ರ ಮತ, ಇಲ್ಲದಿದ್ದರೆ ನಮ್ಮೂರಿಗೆ ಯಾವ ರಾಜಕೀಯ ಪಕ್ಷಕ್ಕೂ ಪ್ರವೇಶವಿಲ್ಲ” ಎಂಬ ಬ್ಯಾನರ್ ಹಿಡಿದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿರುವ ಗ್ರಾಮಸ್ಥರು, ಕೊಪ್ಪ ತಾಲೂಕಿನ ಗಡಿಗ್ರಾಮವಾಗಿರುವ ನೇಫಾ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಳೆದ ಸುಮಾರು 25 ವರ್ಷಗಳಿಂದ ದುರಸ್ತಿ ಕಾಣದೆ ಸಂಪೂರ್ಣ ಹದಗೆಟ್ಟಿದೆ. ಇಡೀ ರಸ್ತೆಯೇ ಹೊಂಡಗುಂಡಿಗಳಿಂದ ಕೂಡಿದ್ದು, ನಿತ್ಯ ವಾಹನ ಸವಾರರು ಜೀವಭಯದಲ್ಲೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ವಿಧಾನಸಭಾ ಚುನಾವಣೆಯನ್ನೂ ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದರು. ಈ ವೇಳೆ ಗ್ರಾಮಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು ಚುನಾವಣೆ ಬಳಿಕ ರಸ್ತೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದರು. ಆದರೆ ಚುನಾವಣೆ ಮುಗಿದು ವರ್ಷಗಳು ಕಳೆದರೂ ರಸ್ತೆ ಸಮಸ್ಯೆ ಮಾತ್ರ ಬಗೆಹರಿದಿಲ್ಲ. ಅಂದು ಭರವಸೆ ನೀಡಿದ್ದ ಅಧಿಕಾರಿಗಳೂ ಈಗ ಗ್ರಾಮದಲ್ಲಿ ಇಲ್ಲ. ಹೀಗಾಗಿ ಈ ಬಾರಿ ಯಾರ ಭರವಸೆಗೂ ಮಣಿಯದೆ, ತಮ್ಮೂರಿನ ರಸ್ತೆ ಅಭಿವೃದ್ಧಿಯಾಗುವವರೆಗೂ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಹಾಗೂ ಯಾವುದೇ ರಾಜಕೀಯ ಪಕ್ಷದವರಿಗೂ ಗ್ರಾಮಕ್ಕೆ ಪ್ರವೇಶ ನೀಡುವುದಿಲ್ಲ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
