ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಪ್ರದೇಶದಲ್ಲಿ ಕಾಡಾನೆಗಳ ಭೀತಿ ಕಡಿಮೆಯಾಗದೇ ಮುಂದುವರೆಯುತ್ತಿದೆ. ಎನ್.ಆರ್.ಪುರ ತಾಲ್ಲೂಕಿನ ಹಳೇಹಳ್ಳಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು, ವಾಹನ ಸವಾರರು ಹಾಗೂ ಸ್ಥಳೀಯರಲ್ಲಿ ಭಯ ಹುಟ್ಟಿಸಿದೆ. ಬಾಳೆಹೊನ್ನೂರು-ಎನ್.ಆರ್.ಪುರ ಸಂಪರ್ಕಿಸುವ ಹೆದ್ದಾರಿಯಲ್ಲಿ ಆನೆ ಸಂಚರಿಸುತ್ತಿರುವುದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ಪ್ರದೇಶದಲ್ಲಿ ಆಗಾಗ ಕಾಡಾನೆಗಳು ಸಂಚರಿಸುತ್ತಿರುವುದರಿಂದ ಗ್ರಾಮಸ್ಥರು ಆತಂಕಗೊಂಡಿದ್ದು, ಆನೆಗಳನ್ನು ಸ್ಥಳಾಂತರಿಸುವಂತೆ ಹಲವು ಬಾರಿ ಕೇಳಿಕೊಂಡಿದ್ದಾರೆ.
