ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮಧ್ಯರಾತ್ರಿ ಮೆಕ್ಕೆಜೋಳ ತುಂಬಿದ್ದ ಲಾರಿಯೊಂದು ಸಂಪೂರ್ಣವಾಗಿ ಹೊತ್ತಿ ಉರಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಸುಟ್ಟು ಕರಕಲಾಗಿದೆ. ಜಾವಗಲ್ನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಮೆಕ್ಕೆಜೋಳದ ಲಾರಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಬೆಂಕಿಯ ಕೆನ್ನಾಲಿಗೆ ಅರಣ್ಯ ಪ್ರದೇಶಕ್ಕೂ ವ್ಯಾಪಿಸಿದ್ದು, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ತುರ್ತು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಇದರಿಂದ ಭಾರಿ ಅನಾಹುತ ತಪ್ಪಿದೆ. ಲಾರಿಯಲ್ಲಿ ಇದ್ದ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.
