ಮೂಡಿಗೆರೆ: ಜಿಲ್ಲಾ ಕೃಷಿಕ ಸಮಾಜ ಮತ್ತು ಮೂಡಿಗೆರೆ ತಾಲ್ಲೂಕು ಕೃಷಿಕ ಸಮಾಜದ ವತಿಯಿಂದ ಮಾಜಿ ಪ್ರಧಾನಿ ಚೌದ್ರಿ ಚರಣ್ ಸಿಂಗ್ ಅವರ ಗೌರವಾರ್ಥ ಅವರ ಜನ್ಮದಿನವನ್ನು ರೈತ ದಿನಾಚರಣೆಯಾಗಿ ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಮಾಜದ ಪ್ರಧಾನ ಕಾರ್ಯದರ್ಶಿ ಬಿ.ಆರ್. ಯತೀಶ್, ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಮತ್ತು ನಿಗಧಿತ ಬೆಲೆ ಸಿಗಬೇಕು. ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕೆಂದರೆ ಮಾರುಕಟ್ಟೆ ವ್ಯವಸ್ಥೆ ಸುಧಾರಣೆ ಆಗಬೇಕು ಎಂದು ತಿಳಿಸಿದರು. ಕೃಷಿಕ ಸಮಾಜ ರಾಜ್ಯ ಸರ್ಕಾರದ ಒಂದು ಅಂಗವಾಗಿದ್ದು, ರಾಜ್ಯದ ರೈತರ ಶ್ರೇಯೋಭಿವರದ್ಧಿಗೆ ಪೂರಕವಾದ ಸಲಹೆಗಳನ್ನು ಸರ್ಕಾರಕ್ಕೆ ನೀಡುವ ಕೆಲಸ ಮಾಡುತ್ತಿದೆ. ರಾಜ್ಯ ಕೃಷಿ ಸಚಿವರು ಕೃಷಿಕ ಸಮಾಜದ ಸಲಹೆಗಳಿಗೆ ಹೆಚ್ಚಿನ ಮಾನ್ಯತೆ ನೀಡಿ ಅದನ್ನು ಕಾರ್ಯರೂಪಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಭಾರತ ಸರ್ಕಾರವು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ರೈತರು ಸರ್ಕಾರದ ಯೋಜನೆಗಳ ಮತ್ತು ತಂತ್ರಜ್ಞಾನದ ಸದ್ಬಳಕೆ ಮಾಡಿಕೊಂಡು ಸಮಗ್ರ ಕೃಷಿಯ ಮೂಲಕ ಹೆಚ್ಚಿನ ಲಾಭ ಗಳಿಸಬೇಕು. ಎಂದು ಚಿಕ್ಕಮಗಳೂರು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಡಿ.ಎಲ್. ಅಶೋಕ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಪಿ.ಕೆ. ನಾಗೇಶ್, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಕೃಷ್ಣಮೂರ್ತಿ,ರೈತ ಸಂಘದ ಮುಖಂಡ ಬಿ.ಸಿ.ದಯಾಕರ್ ಮತ್ತು ಗಣ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕೃಷಿ ಇಲಾಖೆ ನಿವೃತ್ತ ನೌಕರ ಪುಟ್ಟಸ್ವಾಮಿ ಹಾಗೂ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ರೈತರನ್ನು ಗೌರವಿಸಲಾಯಿತು.
