ಚಿಕ್ಕಮಗಳೂರು: ನಗರದ ಐ.ಜಿ. ರಸ್ತೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಿ ಸುಗಮ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಜಿಲ್ಲಾಡಳಿತ ಹೊಸ ಪಾರ್ಕಿಂಗ್ ನಿಯಮಗಳನ್ನು ಜಾರಿಗೊಳಿಸಿದೆ. ಮಥಾಯಸ್ ಟವರ್ನಿಂದ ಎನ್.ಎಂ.ಸಿ ವೃತ್ತದವರೆಗೆ ರಸ್ತೆಯ ಎರಡೂ ಬದಿಯಲ್ಲಿ ದ್ವಿಚಕ್ರ ವಾಹನಗಳಿಗೆ 100 ಅಡಿ ಹಾಗೂ ನಾಲ್ಕು ಚಕ್ರದ ವಾಹನಗಳಿಗೆ 200 ಅಡಿ ಅಂತರದಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿದ್ದು, ಈ ಕುರಿತು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಸ್ತೆ ವಿಭಜಕ ನಿರ್ಮಾಣದ ಬಳಿಕ ಉಂಟಾಗಿದ್ದ ‘ಯು-ಟರ್ನ್’ ಸಮಸ್ಯೆ ಹಾಗೂ ಸಂಚಾರ ಅಡಚಣೆಗಳನ್ನು ನಿವಾರಿಸಲು ಸಾರ್ವಜನಿಕರ ಬೇಡಿಕೆಯ ಮೇರೆಗೆ ಪ್ರಾಯೋಗಿಕವಾಗಿ ಜಾರಿಗೊಳಿಸಿದ್ದ ಈ ವ್ಯವಸ್ಥೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ, ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಸ್ತಾವನೆ ಆಧರಿಸಿ ಕೇಂದ್ರ ಮೋಟಾರು ವಾಹನ ಕಾಯ್ದೆಯಡಿ ಇದನ್ನು ಖಾಯಂ ನಿಯಮವಾಗಿ ಜಾರಿಗೊಳಿಸಲಾಗಿದೆ.
