
ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ಗೆ ಮುಹೂರ್ತ ನಿಗದಿಯಾಗಿದ್ದು, ಮಾರ್ಚ್ 6ರಿಂದ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಮಾರ್ಚ್ 6ರಂದು ಮುಖ್ಯಮಂತ್ರಿ ತಮ್ಮ ದಾಖಲೆಯ 17ನೇ ಬಜೆಟ್ ಮಂಡಿಸಲಿದ್ದು, ಈ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈಗಾಗಲೇ ವಿವಿಧ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳ ಜೊತೆ ಪೂರ್ವಸಿದ್ಧತಾ ಸಭೆಗಳನ್ನು ನಡೆಸಿರುವ ಅವರು ಹಿಂದುಳಿದ ವರ್ಗಗಳ ಸಂಘಟನೆಗಳ ಜೊತೆಗೂ ಚರ್ಚೆ ನಡೆಸಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಮಾಹಿತಿ ನೀಡಿದ್ದು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ಬೀದರ್, ಕೊಪ್ಪಳ, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ ನೀಡಲು ₹15.34 ಕೋಟಿ ವೆಚ್ಚಕ್ಕೆ ಅನುಮೋದನೆ ದೊರೆತಿದೆ. ಜೊತೆಗೆ ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಜೀನ್ ಬ್ಯಾಂಕ್ ನಿರ್ಮಾಣಕ್ಕೆ ₹11.12 ಕೋಟಿ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನಲ್ಲಿ 2000 ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲಗೃಹ ನಿರ್ಮಾಣಕ್ಕೆ ₹10.32 ಕೋಟಿ ನಬಾರ್ಡ್ ನೆರವಿನೊಂದಿಗೆ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ. ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯದ ಟಿಬಿ ಆಸ್ಪತ್ರೆ ಆವರಣದಲ್ಲಿ 200 ಹಾಸಿಗೆಗಳ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೂ ಅನುಮೋದನೆ ಸಿಕ್ಕಿದ್ದು, ಕಲ್ಲುಗಣಿ ಗುತ್ತಿಗೆ ಪ್ರದೇಶಗಳಲ್ಲಿ ಹೆಚ್ಚುವರಿ ಉಪಖನಿಜ ಗಣಿಗಾರಿಕೆ ಪ್ರಕರಣಗಳಲ್ಲಿ ವಿಧಿಸಲಾದ ದಂಡವನ್ನು ಯೋಜನೆಯಡಿ ವಸೂಲಿ ಮಾಡಲು ಹಾಗೂ ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು, 1994ಕ್ಕೆ ತಿದ್ದುಪಡಿ ಮಾಡಲು ಮಾರ್ಗಸೂಚಿಗಳನ್ನು ಹೊರಡಿಸಲು ಕ್ಯಾಬಿನೆಟ್ ಅನುಮೋದಿಸಿದೆ.




