
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಜೇನುಹುಳಗಳ ದಾಳಿಯಿಂದ ರೈತೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಕರಿಯಾನಾಯ್ಕ (61) ಮೃತ ರೈತರಾಗಿದ್ದಾರೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಜೇನುಹುಳಗಳ ಗುಂಪು ದಾಳಿ ನಡೆಸಿದ್ದು, ಇದರಿಂದ ಕರಿಯಾನಾಯ್ಕ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಸಖರಾಯಪಟ್ಟಣ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗೆ ಚಿಕ್ಕಮಗಳೂರಿಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. ಈ ವೇಳೆ ಕರಿಯಾನಾಯ್ಕ ಅವರ ಮಗ ಪ್ರದೀಪ್ ಮೇಲೂ ಜೇನುಹುಳಗಳು ದಾಳಿ ನಡೆಸಿದರೂ ಅವರು ಅಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.




