ಮೂಡಿಗೆರೆ: ಭೀಮ ಕೊರೇಂಗಾವ್ ಆಚರಣೆ ಸಂಘದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆಗಳು ನಡೆಯುತ್ತಿದ್ದು, ಇದರ ಭಾಗವಾಗಿ ಏಪ್ರಿಲ್ 17ರಂದು ಬೆಳಗ್ಗೆ 11 ಗಂಟೆಗೆ ಕೊಲ್ಲಿಬೈಲ್ನಿಂದ ಹ್ಯಾಂಡ್ ಪೋಸ್ಟ್ ಸರ್ಕಲ್ವರೆಗೆ ಬೃಹತ್ ಬೈಕ್ ಜಾಥ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸುಂದ್ರೇಶ್ ಕನ್ನಾಪುರ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅಂಬೇಡ್ಕರ್ ಜಯಂತಿ ಕೇವಲ ಸ್ಮರಣೆ ದಿನವಲ್ಲದೆ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶವನ್ನು ಸಾರುವ ಮಹತ್ವದ ದಿನವಾಗಿರುವುದರಿಂದ ಈ ಬಾರಿ ವಿಶೇಷವಾಗಿ ಆಚರಿಸಲಾಗುತ್ತಿದೆ ಎಂದೂ ಅವರು ಹೇಳಿದರು. ಇದೇ ಕಾರ್ಯಕ್ರಮದ ಮುಂದುವರಿದ ಭಾಗವಾಗಿ ಏಪ್ರಿಲ್ 24ರಂದು ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಅಂಬೇಡ್ಕರ್ ಜಯಂತೋತ್ಸವವನ್ನು ಭವ್ಯವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಸುಂದ್ರೇಶ್ ಹೊಯ್ಸಳಲು ಹಾಗೂ ಖಜಾಂಚಿ ಭಾನುಪ್ರಕಾಶ್ ಉಪಸ್ಥಿತರಿದ್ದರು.
