
ಚಿಕ್ಕಮಗಳೂರು: ಜಿಲ್ಲೆಯ ಬಣಕಲ್–ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ಮಹಿಳೆ ಮತ್ತು ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಮಹಿಳೆಯರು ಹಾಗೂ ಮಕ್ಕಳಿಗೆ ವಿವಿಧ ಸುರಕ್ಷತಾ ಕ್ರಮಗಳ ಬಗ್ಗೆ ಪೊಲೀಸರು ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಸಹಾಯವಾಣಿ, ಬಾಲ್ಯ ವಿವಾಹ ತಡೆ, ಪೋಕ್ಸೋ ಕಾಯಿದೆ ಸೇರಿದಂತೆ ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳ ಕುರಿತು ಅರಿವು ಮೂಡಿಸಲಾಯಿತು. ತುರ್ತು ಪರಿಸ್ಥಿತಿಯಲ್ಲಿ ಸಹಾಯ ಪಡೆಯಲು 112, 181, 1098 ಹಾಗೂ 1930 ಸಹಾಯವಾಣಿ ಸಂಖ್ಯೆಗಳ ಮಹತ್ವವನ್ನು ಸಾರ್ವಜನಿಕರಿಗೆ ವಿವರಿಸಲಾಯಿತು. ಮೂಡಿಗೆರೆ ಪೊಲೀಸ್ ಠಾಣೆಯ ಡಬ್ಲ್ಯೂಪಿಸಿ ಸುಜಾತ ನೇತೃತ್ವದಲ್ಲಿ ನಡೆದ ಈ ಜಾಗೃತಿ ಕಾರ್ಯಕ್ರಮದಲ್ಲಿ ಅಕ್ಕಪಡೆಯ ಸಿಬ್ಬಂದಿಗಳಾದ ಮೋನಿಕಾ, ಪ್ರೇಮ, ಅಂಬಿಕಾ ಹಾಗೂ ಯೋಗೀಶ್ ಭಾಗವಹಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.




