
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಮುಂದಾಗಿದ್ದು, ನಿಜವಾದ ಅರ್ಹರಿಗೆ ಮಾತ್ರ ಸೌಲಭ್ಯ ತಲುಪುವಂತೆ ಸಮಗ್ರ ಪರಿಶೀಲನೆ ನಡೆಸಲು ತೀರ್ಮಾನಿಸಿದೆ. ಈ ಕುರಿತು ನಡೆದ ಎಸ್ಐಆರ್ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿದ್ದು, ಯೋಜನೆಗಳ ಲಾಭವನ್ನು ಅನರ್ಹರು ಪಡೆಯುತ್ತಿರುವುದು, ಮೃತಪಟ್ಟವರ ಹೆಸರಿನಲ್ಲಿಯೂ ಹಣ ಜಮೆಯಾಗುತ್ತಿರುವುದು, ಒಂದೇ ಕುಟುಂಬದ ಒಂದಕ್ಕಿಂತ ಹೆಚ್ಚು ಸದಸ್ಯರಿಗೆ ಸೌಲಭ್ಯ ದೊರೆಯುತ್ತಿರುವುದು ಹಾಗೂ ತೆರಿಗೆ ಪಾವತಿಸುವವರೂ ಯೋಜನೆಗಳ ಪ್ರಯೋಜನ ಪಡೆಯುತ್ತಿರುವಂತಹ ಅಕ್ರಮಗಳು ಸರ್ಕಾರದ ಗಮನಕ್ಕೆ ಬಂದಿವೆ. ಪ್ರಸ್ತುತ ರಾಜ್ಯದಲ್ಲಿ 1.24 ಕೋಟಿಗೂ ಹೆಚ್ಚು ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಪಟ್ಟಿಯಲ್ಲಿರುವ ತಾಂತ್ರಿಕ ದೋಷಗಳು ಮತ್ತು ನಿಯಮ ಉಲ್ಲಂಘನೆಗಳನ್ನು ಗುರುತಿಸಿ ಅನರ್ಹರನ್ನು ಕೈಬಿಡುವ ಮೂಲಕ ಯೋಜನೆಗಳಲ್ಲಿ ಪಾರದರ್ಶಕತೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಮಗ್ರ ಪರಿಶೀಲನೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ.




