
ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ, ಅರೆ ಸರ್ಕಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಂಘದ ವತಿಯಿಂದ ರಾಜ್ಯ ಸಮಾವೇಶದ ಪೂರ್ವಭಾವಿ ಸಿದ್ಧತಾ ಸಭೆ ಹಾಗೂ ಕಾರ್ಯಾಗಾರವನ್ನು ಬೆಂಗಳೂರಿನ ಬಿಬಿಎಂಪಿ ಮುಖ್ಯ ಕಚೇರಿಯ ಡಾ. ರಾಜ್ಕುಮಾರ್ ಗಾಜಿನ ಮನೆ ಸಭಾಂಗಣದಲ್ಲಿ ಆಯೋಜಿಸಲಾಯಿತು.
ರಾಜ್ಯದ 240 ತಾಲೂಕು ಘಟಕಗಳು ಹಾಗೂ 32 ಜಿಲ್ಲಾ ಘಟಕಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ, ವಿವಿಧ ಇಲಾಖೆಗಳ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರು ತಮ್ಮ ಸೇವಾ ಅವಧಿಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದರು. ಉನ್ನತ ಅಧಿಕಾರಿಗಳು, ಸಾರ್ವಜನಿಕರು ಹಾಗೂ ರಾಜಕೀಯ ವ್ಯಕ್ತಿಗಳಿಂದ ನಡೆಯುತ್ತಿರುವ ಅನ್ಯಾಯ, ದಬ್ಬಾಳಿಕೆ, ದೌರ್ಜನ್ಯ ಮತ್ತು ಶೋಷಣೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರಿಗೆ ಮನವಿ ಸಲ್ಲಿಸುವ ಬಗ್ಗೆ ಸಭೆಯಲ್ಲಿ ಒತ್ತಾಯಿಸಲಾಯಿತು.
2026ನೇ ಸಾಲಿನ ಸದಸ್ಯತ್ವ ನೋಂದಣಿಯನ್ನು ರಾಜ್ಯದ ಎಲ್ಲಾ 84 ಇಲಾಖೆಗಳ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರು ಕೂಡಲೇ ಮಾಡಿಕೊಳ್ಳುವಂತೆ ಜಾಗೃತಿ ಮೂಡಿಸುವ ನಿರ್ಧಾರ ಕೈಗೊಳ್ಳಲಾಯಿತು. ಜೊತೆಗೆ ಬೆಳಗಾವಿ ವಿಭಾಗೀಯ ಸಮಾವೇಶ, ಮೈಸೂರು ವಿಭಾಗೀಯ ಸಮಾವೇಶ ಹಾಗೂ ಬೆಂಗಳೂರು ರಾಜ್ಯ ಸಮಾವೇಶವನ್ನು ಶೀಘ್ರದಲ್ಲೇ ಆಯೋಜಿಸಲು ತೀರ್ಮಾನಿಸಲಾಯಿತು.
ರಾಜ್ಯದಲ್ಲಿ ಹಲವು ವರ್ಷಗಳಿಂದ ಖಾಲಿ ಉಳಿದಿರುವ ಬ್ಯಾಕ್ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಹಾಗೂ ಎಲ್ಲಾ ಇಲಾಖೆಗಳಲ್ಲಿ ರೋಸ್ಟರ್ ಬಿಂದುಗಳನ್ನು ಕಡ್ಡಾಯವಾಗಿ ಜಾರಿಗೊಳಿಸಿ ಸಮರ್ಪಕವಾಗಿ ಪಾಲನೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸಭೆ ಅಂಗೀಕರಿಸಿತು.
ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಮಹೇಶ್ ಸಿ. ಹುಬ್ಬಳ್ಳಿ, ರಾಜ್ಯ ಕಾರ್ಯಾಧ್ಯಕ್ಷ ಜೈ ಭೀಮ್, ರಾಜ್ಯ ಕಾರ್ಯಾಧ್ಯಕ್ಷ ಅನಿಲ್ ಕುಮಾರ್, ನ್ಯಾಯಾಂಗ ಇಲಾಖೆ ಪ್ರಧಾನ ಕಾರ್ಯದರ್ಶಿ ಶಶಿಕಲಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್. ಜಡಗಿ, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಶ್ರೀಧರ್ ಕೊಟ್ರೆ, ಜಿಲ್ಲಾ ಗೌರವಾಧ್ಯಕ್ಷ ನಾಗರಾಜ್, ರಾಜ್ಯ ಉಪಾಧ್ಯಕ್ಷ ಮುನಿಕೃಷ್ಣಪ್ಪ, ನ್ಯಾಯಾಂಗ ಇಲಾಖೆ ರಾಜ್ಯ ಪದಾಧಿಕಾರಿಗಳಾದ ಸಂಗಮ ಫರ್ತಾಬಾದ್ ಹಾಗೂ ಸುನಿತಾ ಕೊಂಬಿನ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗೀತಾ ಮೇಲಿನಕೇರಿ, ಅಶೋಕ್ ಕಲಾದಗಿ, ರವಿ ಹಾದಿಮನಿ, ಶಿಕ್ಷಣಪ್ಪ ಮಂಟಾಳೆ, ಬೆಳಗಾವಿ ಜಿಲ್ಲಾಧ್ಯಕ್ಷ ಮಹದೇವ ಐಹೊಳೆ, ರಾಜ್ಯ ಜಂಟಿ ಕಾರ್ಯದರ್ಶಿಗಳಾದ ಗೋವಿಂದ ಸಣ್ಣಕ್ಕಿ ಹಾಗೂ ಅಂಬಿಕಾ ಗಾಯಕ್ವಾಡ್ ಸೇರಿದಂತೆ ರಾಜ್ಯ ಘಟಕದ ಅನೇಕ ಪದಾಧಿಕಾರಿಗಳು ಭಾಗವಹಿಸಿದರು.
ಈ ಸಂದರ್ಭದಲ್ಲಿ ನ್ಯಾಯಾಂಗ ಇಲಾಖೆ ನೌಕರರಾದ ಶಫಿವುಲ್ಲಾ ಖಾನ್ ರಚಿಸಿದ “ಸಮಾನತೆಯ ಬೆಳಕು – ಡಾ. ಬಿ.ಆರ್. ಅಂಬೇಡ್ಕರ್” ಕೃತಿಯನ್ನು ಲೋಕಾರ್ಪಣೆ ಮಾಡಲಾಯಿತು. ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಡಾ. ಮಲ್ಲಿಕಾ ಎಂ.ಎಸ್. ಹಾಗೂ ಹಿರಿಯ ಸಾಹಿತಿ ಮತ್ತು ಮುಖಂಡ ಗದಗ್ ಭಾಗವಹಿಸಿ ಕೃತಿಯ ಮಹತ್ವವನ್ನು ವಿವರಿಸಿದರು.




