
ಉತ್ತರ ಕನ್ನಡ: ಜಿಲ್ಲೆಯ ಅಂಕೋಲಾ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಖಾಸಗಿ ಬಸ್ವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಳ್ಳಾರಿಯಿಂದ ಗೋವಾ ಕಡೆಗೆ ತೆರಳುತ್ತಿದ್ದ ಈ ಖಾಸಗಿ ಬಸ್ನಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಅಪಘಾತ ಸಂಭವಿಸಿದ ತಕ್ಷಣ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಸುಮಾರು ಒಂದೂವರೆ ಗಂಟೆಗಳ ಕಾಲ ಹೆದ್ದಾರಿ ಬಂದ್ ಆಗಿದ್ದರಿಂದ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತು ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡವರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಣ್ಣಪುಟ್ಟ ಗಾಯಗಳಾಗಿರುವವರಿಗೆ ಅಂಕೋಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಟ್ರಾಫಿಕ್ ನಿಯಂತ್ರಣಕ್ಕೆ ತಂದರು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹ ಸ್ಥಳೀಯರು ನೆರವು ನೀಡಿದ್ದು, ಅವರ ತ್ವರಿತ ಸ್ಪಂದನೆಯಿಂದ ಪರಿಸ್ಥಿತಿಯನ್ನು ನಿಯಂತ್ರಿಸಲು ಸಾಧ್ಯವಾಯಿತು ಎಂದು ತಿಳಿದು ಬಂದಿದೆ.



