ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ನಾಗರಿಕರಿಗೆ ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಸುದ್ದಿ ಹೊರಬಿದ್ದಿದೆ. ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಕಮಿಷನರ್ ಆಫ್ ಮೆಟ್ರೋ ರೈಲ್ವೇ ಸೇಫ್ಟಿ ಇಲಾಖೆಯ ಅನುಮೋದನೆ ದೊರೆತಿದೆ. ಇತ್ತೀಚೆಗೆ ಈ ಮಾರ್ಗದಲ್ಲಿ ಸುರಕ್ಷತೆ ಮತ್ತು ಭದ್ರತಾ ಪರಿಶೀಲನೆ ನಡೆಸಲಾಗಿದ್ದು, ಇದೀಗ ಪರಿಶೀಲನೆಯ ಬಳಿಕ ಮೆಟ್ರೋ ರೈಲ್ವೇ ಸುರಕ್ಷತಾ ಇಲಾಖೆ ಹಸಿರು ನಿಶಾನೆ ನೀಡಿದೆ. ಸುಮಾರು 7.5 ಕಿಲೋಮೀಟರ್ ಉದ್ದದ ಈ ಮಾರ್ಗದಲ್ಲಿ ಒಟ್ಟು ಆರು ನಿಲ್ದಾಣಗಳಿದ್ದು, ಶೀಘ್ರದಲ್ಲೇ ಪ್ರಯಾಣಿಕರ ಸೇವೆಗೆ ಮುಕ್ತವಾಗುವ ನಿರೀಕ್ಷೆಯಿದೆ. ನವೆಂಬರ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪಿಂಕ್ ಲೈನ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಇನ್ನು ನಾಗವಾರದವರೆಗಿನ ಪಿಂಕ್ ಲೈನ್ ವಿಸ್ತರಣಾ ಕಾಮಗಾರಿಯೂ ಬಹುತೇಕ ಪೂರ್ಣಗೊಂಡಿದ್ದು, ನವೆಂಬರ್ನಲ್ಲಿ ವಿಸ್ತರಿತ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ನಡೆಸುವ ಸಾಧ್ಯತೆಯಿದೆ.
