ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಮೃತರು ಶೃಂಗೇರಿ ತಾಲೂಕಿನ ಮೆಣಸೆ ಗ್ರಾಮದವರು ಎಂದು ಗುರುತಿಸಲಾಗಿದ್ದು, ಚೆನ್ನಗಿರಿಯಿಂದ ಶೃಂಗೇರಿಯತ್ತ ತೆರಳುತ್ತಿದ್ದ ವೇಳೆ ಮಂಗಳೂರಿನಿಂದ ರಾಯಚೂರು ಕಡೆಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ನಡುವೆ ಭಾರತೀಪುರ ಕ್ರಾಸ್ ಬಳಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂ ಆಗಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಸದ್ಯ ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆ ಮುಂದುವರಿದಿದೆ. ಬಸ್ನ ಮುಂಭಾಗಕ್ಕೂ ಹಾನಿಯಾಗಿದ್ದು, ಅದೃಷ್ಟವಶಾತ್ ಕೆಎಸ್ಆರ್ಟಿಸಿ ಬಸ್ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
