
ಬೆಂಗಳೂರು: ಗ್ಯಾರಂಟಿ ಯೋಜನೆಗಳ ದುರ್ಬಳಕೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಬಳಿಕ ಗೃಹಜ್ಯೋತಿ ಯೋಜನೆಯ ಪರಿಷ್ಕರಣೆಗೆ ಮುಂದಾಗಿದ್ದು, ಅನರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಯ ಸೌಲಭ್ಯವನ್ನು ಅರ್ಹರಿಗೆ ಮಾತ್ರ ತಲುಪಿಸುವ ಉದ್ದೇಶದಿಂದ ಇ-ಕೆವೈಸಿ, ಆಧಾರ್ ಹಾಗೂ ಮೊಬೈಲ್ ಸಂಖ್ಯೆ ಆಧಾರಿತ ಮರುಪರಿಶೀಲನೆ ನಡೆಸಲು ಸಿದ್ಧತೆ ನಡೆಸಿದೆ. ಗೃಹಜ್ಯೋತಿ ಯೋಜನೆಯಡಿ ಪ್ರಸ್ತುತ ರಾಜ್ಯದ ಸುಮಾರು 1.70 ಕೋಟಿ ಕುಟುಂಬಗಳು ಉಚಿತ ವಿದ್ಯುತ್ ಪಡೆಯುತ್ತಿದ್ದು, ಸರ್ಕಾರ ಪ್ರತಿ ತಿಂಗಳು ಸುಮಾರು 440 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ. ಆದರೆ ಗೃಹಬಳಕೆಯ ಹೆಸರಿನಲ್ಲಿ ವಾಣಿಜ್ಯ ಬಳಕೆಗಾಗಿ ಉಚಿತ ವಿದ್ಯುತ್ ಪಡೆಯುತ್ತಿರುವುದು ಹಾಗೂ ಹೊರರಾಜ್ಯದ ಕೆಲವರು ಸಹ ಯೋಜನೆಯ ಲಾಭ ಪಡೆಯುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಮರುಪರಿಶೀಲನೆಗೆ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ. ಇದೇ ವೇಳೆ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಕರ್ನಾಟಕದಲ್ಲಿ ಮತದಾರರಾಗಿರುವ ಅರ್ಹರಿಗೆ ಮಾತ್ರ ಗ್ಯಾರಂಟಿ ಯೋಜನೆಗಳ ಸೌಲಭ್ಯ ದೊರೆಯಬೇಕು ಎಂದು ಹೇಳಿದ್ದು, ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಜಮೆಯಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ. ಮತ್ತೊಂದೆಡೆ, ಯೋಜನೆಗಳ ಪರಿಷ್ಕರಣೆ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿಗೆ ತಿರುಗೇಟು ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ, ಅರ್ಹರಿಗೆ ಸೌಲಭ್ಯ ತಲುಪಿಸುವ ಉದ್ದೇಶದಿಂದ ಮಾತ್ರ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.





