
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ವಿಧಾನಸಭೆ ಸ್ಪೀಕರ್, ಡೆಪ್ಯೂಟಿ ಸ್ಪೀಕರ್, ವಿಧಾನ ಪರಿಷತ್ ಸಭಾಪತಿ ಹಾಗೂ ಉಪಸಭಾಪತಿಗಳ ಹೆಸರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿಕೃತವಾಗಿ ಪ್ರಕಟಿಸಿದೆ. ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವರನ್ನು ವಿಧಾನಸಭೆಯ ನೂತನ ಸ್ಪೀಕರ್ ಆಗಿ, ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಡೆಪ್ಯೂಟಿ ಸ್ಪೀಕರ್ ಆಗಿ ನೇಮಿಸಲಾಗಿದೆ. ವಿಧಾನ ಪರಿಷತ್ ಸಭಾಪತಿಯಾಗಿ ಸಲೀಂ ಅಹ್ಮದ್ ಹಾಗೂ ಉಪಸಭಾಪತಿಯಾಗಿ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ, ಮಾಜಿ ಸ್ಪೀಕರ್ ಯು.ಟಿ. ಖಾದರ್ ಈಗ ಸಚಿವ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದು, ಮಾಜಿ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಸೂಚಿಸಿರುವುದಾಗಿ ತಿಳಿಸಿದ್ದಾರೆ. ಹಾಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಸ್ಥಾನಕ್ಕೂ ಬದಲಾವಣೆ ಸಾಧ್ಯತೆ ಹೆಚ್ಚಿದ್ದು, ಕಾಂಗ್ರೆಸ್ನ ಹೊಸ ನಿರ್ಧಾರದ ಬಳಿಕ ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಚುನಾವಣಾ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಪರವಾಗಿ ತೀರ್ಪು ನೀಡಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ರಾಜೀನಾಮೆ ಘೋಷಿಸಿದ್ದರಿಂದ ಖಾಲಿಯಾಗಿದ್ದ ಆ ಹುದ್ದೆಗೆ ಉಮಾಶ್ರೀ ಅವರನ್ನು ನೇಮಿಸಲಾಗಿದೆ.




