
ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ರಾಜ್ಯಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಖಡಕ್ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದೆ. ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿರುವುದನ್ನು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಆರೋಪಿಸಿರುವ ಮಹಾಸಭಾ, ಸಂಬಂಧಿತ ಪರೀಕ್ಷಾ ಕೇಂದ್ರದ ಕಾಲೇಜಿನ ಪರವಾನಗಿ ರದ್ದುಪಡಿಸಿ ಕನಿಷ್ಠ 25 ಲಕ್ಷ ರೂ. ದಂಡ ವಿಧಿಸಬೇಕೆಂದು ಆಗ್ರಹಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಮಹಾಸಭಾ ಅಧ್ಯಕ್ಷ ಎಸ್. ರಘುನಾಥ್, ನಿಯಮದಲ್ಲೇ ಇಲ್ಲದಿದ್ದರೂ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವುದು ಅತ್ಯಂತ ಖಂಡನೀಯವಾಗಿದ್ದು, ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಮಾನಸಿಕವಾಗಿ ನೊಂದಿದ್ದಾರೆ ಎಂದು ಹೇಳಿದ್ದಾರೆ. ಕಳೆದ ವರ್ಷವೂ ಇಂತಹದ್ದೇ ಘಟನೆ ನಡೆದಾಗ ಕರ್ನಾಟಕ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೇವೆ, ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಭರವಸೆ ನೀಡಿದ್ದರೂ ಮತ್ತೆ ಘಟನೆ ನಡೆದಿರುವುದು ದುರದೃಷ್ಟಕರ ಎಂದು ಆರೋಪಿಸಲಾಗಿದೆ. ಈ ನಡುವೆ ಮಡಿವಾಳ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ಚಿಕ್ಕಬಳ್ಳಾಪುರದಲ್ಲಿಯೂ ಇದೇ ರೀತಿಯ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದ್ದು ಅಲ್ಲಿ ಸಹ ಪ್ರತಿಭಟನೆ ನಡೆಯುತ್ತಿದೆ, ಪ್ರಕರಣದ ಸಂಬಂಧ ದೂರು ಸ್ವೀಕಾರದಲ್ಲಿ ವಿಳಂಬವಾಗುತ್ತಿದೆ ಎಂಬ ಅಸಮಾಧಾನವೂ ವ್ಯಕ್ತವಾಗಿದ್ದು, ನ್ಯಾಯ ದೊರಕುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಎಚ್ಚರಿಕೆ ನೀಡಿದೆ.




