ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮತ್ತೊಂದು ಕೆಎಫ್ಡಿ (ಮಂಗನ ಕಾಯಿಲೆ) ಪ್ರಕರಣ ಪತ್ತೆಯಾಗಿದ್ದು, ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ 30 ವರ್ಷದ ಯುವಕನಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತ ಯುವಕನಿಗೆ ಕೊಪ್ಪ ಸರ್ಕಾರಿ ಆಸ್ಪತ್ರೆಯ ಕೆಎಫ್ಡಿ ವಾರ್ಡಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ಇಬ್ಬರಲ್ಲಿ ಮಂಗನ ಕಾಯಿಲೆ ದೃಢವಾಗಿದೆ. ಇನ್ನೊಬ್ಬ ಸೋಂಕಿತ ರೋಗಿ ಬೇರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ದೃಢವಾದ ಹಿನ್ನೆಲೆ ಕಟ್ಟಿನಮನೆ ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಸ್ಥರು ಶುಚಿತ್ವ ಕಾಪಾಡಿಕೊಳ್ಳುವಂತೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದ್ದಾರೆ.
