
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಒಟ್ಟು 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ರವಿವಾರ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಈ ತೀರ್ಮಾನದ ಕುರಿತು ಮಾಹಿತಿ ಹಂಚಿಕೊಂಡರು. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) ಕೆಲವು ಬೋಧನಾ ಹುದ್ದೆಗಳಿಗೆ ನೇಮಕಾತಿ ನಿಯಮ-2026ರ ಕರಡು ಅಧಿಸೂಚನೆಯನ್ನು ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದ್ದು, ಅದರಂತೆ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರವೇ ನಡೆಯಲಿದೆ ಎಂದು ಅವರು ಪ್ರಕಟಿಸಿದರು.




