
ಕೊಟ್ಟಿಗೆಹಾರ: ಸಹಕಾರ ಕ್ಷೇತ್ರದಲ್ಲಿ ಉತ್ತಮ ಸಾಧನೆ ಹಾಗೂ ರಚನಾತ್ಮಕ ಕಾರ್ಯನಿರ್ವಹಣೆಯನ್ನು ಗುರುತಿಸಿ ನೀಡಲಾಗುವ ರಾಜ್ಯ ಮಟ್ಟದ ಅಫೆಕ್ಸ್ ಬ್ಯಾಂಕ್ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಯ್ಕೆಯಾಗಿದೆ. 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನವೆಂಬರ್ 14ರಿಂದ 20ರವರೆಗೆ ಜಿಲ್ಲೆಯಲ್ಲಿ ಸಹಕಾರ ಸಪ್ತಾಹವನ್ನು ಆಚರಿಸಲಾಗಿದ್ದು, ಸಹಕಾರ ಸಂಸ್ಥೆಗಳ ಬೆಳವಣಿಗೆಯಲ್ಲಿ ಉತ್ತಮ ಪರಿಸರ, ತಂತ್ರಜ್ಞಾನ, ಕೌಶಲ್ಯಾಧಾರಿತ ಹಾಗೂ ವೃತ್ತಿಪರ ಸೇವೆ ಎಂಬ ಧ್ಯೇಯವಾಕ್ಯದೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇದರ ಭಾಗವಾಗಿ ಮೂಡಿಗೆರೆ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವಿಭಾಗದಲ್ಲಿ ಬಣಕಲ್ ಸಂಘವನ್ನು ಉತ್ತಮ ಸಹಕಾರ ಸಂಘವೆಂದು ಗುರುತಿಸಿ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನವೆಂಬರ್ 20ರಂದು ಮಾಕೋನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆದ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಸಂಘಕ್ಕೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ತಿನ ಮಾಜಿ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಹಾಗೂ ಕಳಸೆ ಶಿವಣ್ಣ ಅವರು, ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿರುವುದು ಸಂತಸದ ವಿಚಾರವಾಗಿದ್ದು, ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯ ಪರಿಶ್ರಮಕ್ಕೆ ಸಂದ ಗೌರವವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿಯೂ ಸಂಘವು ಸಹಕಾರ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜಾವಳಿ ಜಗದೀಶ್ ಗೌಡ, ಸಂಘದ ಅಧ್ಯಕ್ಷ ಬಿ.ಎಸ್. ನಾರಾಯಣಗೌಡ, ನಿರ್ದೇಶಕರಾದ ಬಿ.ಎಂ. ಭರತ್, ಕಲ್ಲೇಶ್ ಬಾಳೂರು, ಗಜೇಂದ್ರಗೌಡ ಟಿ.ಎಂ., ರಂಗನಾಥ್, ಬಿ.ಎಸ್. ವಿಕ್ರಂ, ಆರ್. ಅಭಿಲಾಷ್, ಎಚ್.ಕೆ. ಯತೀಶ್, ಬಿ.ಎಂ. ರವೀಂದ್ರ, ಜೆ.ಬಿ. ಲಕ್ಷ್ಮಿ, ಎಚ್.ಕೆ. ಮಮತಾ, ಬಿ.ಬಿ. ಶರತ್, ಚಂದ್ರೆಗೌಡ, ಎ.ಬಿ. ನಾಗೇಶ್ ಗೌಡ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೆ.ಪಿ. ನಿಶಾಂತ್ ಉಪಸ್ಥಿತರಿದ್ದರು.





