
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಬಣಕಲ್ ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿದ್ದಾರೆ. ಮಾರ್ಚ್ 17ರಂದು ಸುರೇಶ್ (54) ಅವರು ಬಣಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತಮ್ಮ ಪತ್ನಿ ಕೆಲಸಕ್ಕೆ ತೆರಳಿದ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಬೋರ್ಡ್ನಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಜಿತೇಂದ್ರಕುಮಾರ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ಉಪಾಧೀಕ್ಷಕರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ತನಿಖೆ ನಡೆಸಿದರು. ತನಿಖೆ ವೇಳೆ ಆರೋಪಿಯಾದ ಹರೀಶ್ (30)ನನ್ನು ಬಂಧಿಸಿ, ಆತನಿಂದ ಅಂದಾಜು ₹16 ಲಕ್ಷ ಮೌಲ್ಯದ 144 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಣಕಲ್ ಪೊಲೀಸ್ ಠಾಣೆಯ ಸಿಬ್ಬಂದಿಗಳ ತ್ವರಿತ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.




