
ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಸೋಮವಾರ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು. ರಾಜ್ಯಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿರುವ ಪ್ರೊ. ಎಂ. ನಾಗರಾಜ್ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳಾದ ಲಿಂಗರಾಜ್ ಪಾಟೀಲ್ ಮತ್ತು ರಘು ಕೌಟಿಲ್ಯ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಭ್ಯರ್ಥಿಗಳಿಗೆ ಶುಭ ಹಾರೈಸಿದರು. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ, ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ರಾಜ್ಯಸಭೆ ಚುನಾವಣೆಗೆ ಆರ್ಎಸ್ಎಸ್ ಹಿನ್ನೆಲೆಯುಳ್ಳ ಹಿರಿಯ ಮುಖಂಡ ಪ್ರೊ. ಎಂ. ನಾಗರಾಜ್ ಅವರನ್ನು ಬಿಜೆಪಿ ಹೈಕಮಾಂಡ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು, ವಿಧಾನ ಪರಿಷತ್ ಚುನಾವಣೆಗೆ ರಘು ಕೌಟಿಲ್ಯ ಹಾಗೂ ಲಿಂಗರಾಜ್ ಪಾಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ. ರಾಜ್ಯಸಭೆ ಸ್ಥಾನಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹೆಸರೂ ಕೇಳಿಬಂದಿದ್ದರೆ, ಡಿ.ವಿ. ಸದಾನಂದ ಗೌಡ ಹಾಗೂ ಮಾಜಿ ಶಾಸಕ ನಿರ್ಮಲ ಕುಮಾರ್ ಸುರಾನ ಅವರ ಹೆಸರುಗಳೂ ಚರ್ಚೆಯಲ್ಲಿದ್ದವು. ಆದರೆ ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಪ್ರೊ. ಎಂ. ನಾಗರಾಜ್ ಅವರಿಗೆ ಅವಕಾಶ ನೀಡಿದೆ. ಪ್ರಸ್ತುತ ರಾಜ್ಯಸಭೆ ಸದಸ್ಯರಾಗಿರುವ ಎಚ್.ಡಿ. ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ ಹಾಗೂ ನಾರಾಯಣ ಕೊರಗಪ್ಪ ಅವರ ಅವಧಿ ಜೂನ್ 25ರಂದು ಅಂತ್ಯಗೊಳ್ಳಲಿದ್ದು, ಜೂನ್ 30ರಂದು ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು, ನಸೀರ್ ಅಹ್ಮದ್, ಎಂ.ಟಿ.ಬಿ. ನಾಗರಾಜ್, ಪ್ರತಾಪ್ ಸಿಂಹ ನಾಯಕ್, ತಿಪ್ಪಣ್ಣಪ್ಪ, ಸುನೀಲ್ ವಲ್ಯಾಪುರ ಹಾಗೂ ಬಿ.ಕೆ. ಹರಿಪ್ರಸಾದ್ ಅವರ ಅವಧಿಯೂ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳು ಹಾಗೂ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಜೂನ್ 18ರಂದು ಮತದಾನ ನಡೆಯಲಿದ್ದು, ಅಂದೇ ಸಂಜೆ 5 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.




