
ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಕಾಗೆಹಳ್ಳ ಸಮೀಪ ಖಾಸಗಿ ಬಸ್ ಒಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಭೀಕರ ಅಪಘಾತ ಸಂಭವಿಸಿದೆ. ಚನ್ನಗಿರಿಯಿಂದ ಭದ್ರಾವತಿಗೆ ಬರುತ್ತಿದ್ದ ಶ್ರೀ ರೇಣುಕಾಂಬ ಬಸ್ ತಿರುವು ತಿರುಗುವಾಗ ನಿಯಂತ್ರಣ ತಪ್ಪಿದ ಪರಿಣಾಮ ಈ ದುರಂತ ನಡೆದಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಬಸ್ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಹಲವರಿಗೆ ತಲೆ, ಕೈ-ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯರು ತಕ್ಷಣ ರಕ್ಷಿಸಿ ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.




