ರಾಜ್ಯದ ನಾಗರಿಕರಿಗೆ ಸರ್ಕಾರಿ ಸೇವೆಗಳನ್ನು ಮತ್ತಷ್ಟು ಸುಲಭವಾಗಿ, ಪಾರದರ್ಶಕವಾಗಿ ಹಾಗೂ ತ್ವರಿತವಾಗಿ ತಲುಪಿಸುವ ಉದ್ದೇಶದಿಂದ ಕಂದಾಯ ಇಲಾಖೆಯ ವತಿಯಿಂದ ಮನೆ ಮನೆಗೆ ತೆರಳಿ ಉಚಿತವಾಗಿ ಜಾತಿ ಪ್ರಮಾಣಪತ್ರ ಹಾಗೂ ಶಾಶ್ವತ ನಿವಾಸಿ ಪ್ರಮಾಣಪತ್ರ (PRC) ವಿತರಿಸುವ ವಿಶೇಷ ಅಭಿಯಾನಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಮುಖ್ಯಮಂತ್ರಿ.ಡಿ.ಕೆ ಶಿವಕುಮಾರ್ ಅವರಿಂದ ಉದ್ಘಾಟನೆಗೊಂಡ ಈ ಯೋಜನೆಯ ಕಾರ್ಯಕ್ರಮದಲ್ಲಿ ಡಾ. ಜಿ. ಪರಮೇಶ್ವರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಅಭಿಯಾನದ ಮೂಲಕ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವ ಅಗತ್ಯವಿಲ್ಲದೆ ಸರ್ಕಾರಿ ಸೇವೆಗಳನ್ನು ಮನೆ ಬಾಗಿಲಿಗೇ ಪಡೆಯುವಂತಾಗಿದ್ದು, ಜನಸ್ನೇಹಿ, ಪಾರದರ್ಶಕ ಹಾಗೂ ಸುಲಭ ಆಡಳಿತವನ್ನು ಜನರ ಬಳಿಗೆ ತಲುಪಿಸುವ ರಾಜ್ಯ ಸರ್ಕಾರದ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ.
