
ಕೊಟ್ಟಿಗೆಹಾರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚಿಕ್ಕಲೂರು ಮೀಸಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಸಬೇಕು ಹಾಗೂ ಮೃತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು ಎಂದು ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ನಿರ್ದೇಶಕ ಹರ್ಷ ಮೇಲ್ವಿನ್ ಲಸ್ರಾದೋ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಹನೂರು ತಾಲೂಕಿನ ನಿವಾಸಿಗಳಾದ ಆಂಟನಿ ಸ್ವಾಮಿ (50), ಜಾನ್ ರೋಸ್ ಪೀಟರ್ (42) ಹಾಗೂ ಆಂಟನಿ ಕುಮಾರ್ (33) ಅವರು ಭಾನುವಾರ ಮುಂಜಾನೆ ಹನೂರು ವನ್ಯಜೀವಿ ವಿಭಾಗದ ಚಿಕ್ಕಲೂರು ಮೀಸಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ ಎಂದು ತಿಳಿಸಿರುವ ಅವರು, ಅರಣ್ಯ ಇಲಾಖೆ ಸಿಬ್ಬಂದಿಯ ಅತಿರೇಕದ ಕ್ರಮದಿಂದ ಅಮಾಯಕ ಜೀವಗಳು ಬಲಿಯಾಗಿದ್ದು, ಮೂರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಹೇಳಿದ್ದಾರೆ. ಯಾವುದೇ ತಪ್ಪು ಕಂಡುಬಂದಿದ್ದರೂ ಅವರನ್ನು ಬಂಧಿಸಿ ಕಾನೂನು ಪ್ರಕ್ರಿಯೆ ಮೂಲಕ ಕ್ರಮ ಕೈಗೊಳ್ಳಬೇಕಿತ್ತು, ಆದರೆ ನೇರವಾಗಿ ಗುಂಡಿಕ್ಕಿರುವುದು ಖಂಡನೀಯವಾಗಿದ್ದು, ಈ ಘಟನೆ ಕ್ರೈಸ್ತ ಸಮುದಾಯಕ್ಕೆ ತೀವ್ರ ಆಘಾತ ತಂದಿದೆ ಎಂದು ತಿಳಿಸಿದ್ದಾರೆ. ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಪ್ರವೇಶ, ಬೇಟೆ ಅಥವಾ ಯಾವುದೇ ಕಾನೂನುಬಾಹಿರ ಚಟುವಟಿಕೆಗಳನ್ನು ಸಮುದಾಯ ಎಂದಿಗೂ ಸಮರ್ಥಿಸುವುದಿಲ್ಲ, ಆದರೆ ಇಂತಹ ಆರೋಪಗಳು ಯಾರನ್ನಾದರೂ ಗುಂಡಿಕ್ಕಿ ಕೊಲ್ಲಲು ಸಮರ್ಥನೆಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಘಟನೆಯ ಸತ್ಯಾಂಶ ಹೊರತರುವ, ಹೊಣೆಗಾರಿಕೆಯನ್ನು ನಿಗದಿಪಡಿಸುವ ಹಾಗೂ ಮೃತರ ಕುಟುಂಬಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯವಿದ್ದು, ಘಟನೆಯ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಜೀವಕ್ಕೆ ತಕ್ಷಣದ ಅಪಾಯವಿತ್ತೇ ಎಂಬುದನ್ನು ಸ್ವತಂತ್ರ ತನಿಖೆಯ ಮೂಲಕ ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ, ಘಟನೆಯಲ್ಲಿ ಭಾಗಿಯಾಗಿದ್ದ ಎಲ್ಲಾ ಅರಣ್ಯ ಇಲಾಖೆ ಸಿಬ್ಬಂದಿಯ ಪಾತ್ರವನ್ನು ಸಮಗ್ರವಾಗಿ ಪರಿಶೀಲಿಸಿ, ಮೃತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವ ಮೂಲಕ ಸರ್ಕಾರ ನ್ಯಾಯ ಒದಗಿಸಬೇಕು ಎಂದು ಹರ್ಷ ಮೇಲ್ವಿನ್ ಲಸ್ರಾದೋ ಮನವಿ ಮಾಡಿದ್ದಾರೆ.




