
ಕೊಟ್ಟಿಗೆಹಾರ: ಸಮೀಪದ ತರುವೆ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯಲ್ಲಿ ಪ್ರಾಂಶುಪಾಲ ಸತೀಶ್ ಪ್ರಸಾದ್ ಜೈಸ್ವಾಲ್ ಹಾಗೂ ಸಿಬ್ಬಂದಿ ಶುಭಂ ವಿದ್ಯಾರ್ಥಿಗಳಿಗೆ ಕ್ರೂರವಾಗಿ ಥಳಿತ ನಡೆಸಿದ್ದಾರೆ ಎನ್ನಲಾಗಿದ್ದು, ವಿದ್ಯಾರ್ಥಿ ಪ್ರೀತಮ್ ಅವರ ತಂದೆ ಕಡೂರು ಮೂಲದ ರಮೇಶ್ ನಾಯಕ್ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ಬಹಿರಂಗವಾಗುತ್ತಿದ್ದಂತೆ ಸ್ಥಳೀಯರು ಮತ್ತು ಪೋಷಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.





