
ಚಿಕ್ಕಮಗಳೂರು: ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ನಡೆದಿದೆ. ಬರ ವೀಕ್ಷಣೆಗಾಗಿ ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಪ್ರದೇಶಗಳ ಪ್ರವಾಸದಲ್ಲಿರುವ ಸಚಿವ ಕೆ.ಜೆ. ಜಾರ್ಜ್, ಅಜ್ಜಂಪುರ ತಾಲೂಕಿನ ಅಮೃತ್ ಮಹಲ್ ತಳಿ ಸಂವರ್ಧನ ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಸಚಿವರ ಕಾರಿನ ಮುಂಭಾಗದಲ್ಲಿ ಸಾಗುತ್ತಿದ್ದ ಪೊಲೀಸ್ ಜೀಪ್, ತಿರುವಿನಲ್ಲಿ ಚಾಲಕ ಬ್ರೇಕ್ ಹಾಕಿದ ವೇಳೆ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ. ಬಳಿಕ ಜೀಪ್ ಅಮೃತ್ ಮಹಲ್ ತಳಿ ಸಂವರ್ಧನ ಕೇಂದ್ರದ ಗೇಟಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಆದರೆ ಪೊಲೀಸ್ ಜೀಪ್ನ ಮುಂಭಾಗದ ಭಾಗಕ್ಕೆ ಹಾನಿಯಾಗಿದ್ದು, ಘಟನೆ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ವರದಿ: ಸಂತೋಷ್ ಅತ್ತಿಗೆರೆ




