
ದಕ್ಷಿಣ ಕನ್ನಡ: ಕರಾವಳಿ ಭಾಗದಲ್ಲಿ ನಿರಂತರ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಮತ್ತು 12ನೇ ತರಗತಿವರೆಗಿನ ಪದವಿ ಪೂರ್ವ ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ. ಇದೇ ವೇಳೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೂ ಜಿಲ್ಲಾಡಳಿತ ರಜೆ ಘೋಷಿಸಿದೆ.
ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ಆದರೆ, ಜಿಲ್ಲಾಧಿಕಾರಿಗಳ ರಜೆ ಆದೇಶವನ್ನು ನಿರ್ಲಕ್ಷಿಸಿ ಕೆಲವು ಖಾಸಗಿ ಶಾಲೆಗಳು, ಕಾಲೇಜುಗಳು ಹಾಗೂ ಶಿಕ್ಷಣ ಸಂಸ್ಥೆಗಳು ತರಗತಿಗಳನ್ನು ನಡೆಸಲು ಮುಂದಾಗಿವೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳ ಮೂಲಕ ಜಿಲ್ಲಾಡಳಿತದ ಗಮನಕ್ಕೆ ಬಂದಿದೆ.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅವರು ಕಠಿಣ ಎಚ್ಚರಿಕೆ ನೀಡಿದ್ದು, ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿ ಯಾವುದೇ ಶಿಕ್ಷಣ ಸಂಸ್ಥೆ ತರಗತಿಗಳನ್ನು ನಡೆಸಿದರೆ ವಿಪತ್ತು ನಿರ್ವಹಣಾ ಕಾಯ್ದೆ–2005ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ರಜೆ ಘೋಷಿಸಿದ ದಿನ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡುವುದು ಎಲ್ಲ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಇನ್ನೊಂದೆಡೆ, ಉತ್ತರ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಕಾರವಾರ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಇಂದು ಮತ್ತು ನಾಳೆಯೂ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅನಗತ್ಯವಾಗಿ ಹೊರಗಡೆ ಸಂಚರಿಸದೆ, ಜಿಲ್ಲಾಡಳಿತ ಹಾಗೂ ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.




