
ಚಿಕ್ಕಮಗಳೂರು: ಅತ್ಯಾಚಾರ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ ಒಂದು ತಿಂಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿರುವ ಬೆನ್ನಲ್ಲೇ, ಆತನ ಕುಟುಂಬದ ಜೊತೆ ನಿರಂತರ ಸಂಪರ್ಕದಲ್ಲಿದ್ದ ಆರೋಪದ ಮೇಲೆ ಎನ್.ಆರ್.ಪುರ ಪೊಲೀಸ್ ಠಾಣೆಯ ಪೇದೆ ಕಾಂತೇಶ್ ಅವರನ್ನು ಅಮಾನತು ಮಾಡಲಾಗಿದೆ. ಪೊಲೀಸ್ ಪೇದೆ ಕಾಂತೇಶ್ ಆರೋಪಿ ಸತೀಶ್ಗೆ ಠಾಣೆಯ ಸಂಪೂರ್ಣ ಮಾಹಿತಿಯನ್ನು ನೀಡುತ್ತಿದ್ದ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯ್ಮಾ ಅವರು ಪೇದೆಯನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ಎನ್.ಆರ್.ಪುರ ಹಾಗೂ ಕೊಪ್ಪ ಪೊಲೀಸ್ ಠಾಣೆಗಳಲ್ಲಿ ಸತೀಶ್ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ಅತ್ಯಾಚಾರ ಸೇರಿದಂತೆ ವಂಚನೆ ಆರೋಪಗಳೂ ಕೇಳಿಬಂದಿವೆ. ಭೂತ ಬಿಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಗೆ ಕೋಳಿ ರಕ್ತ ಕುಡಿಯುವಂತೆ ಹಿಂಸೆ ನೀಡಿದ್ದಾನೆ ಎನ್ನಲಾದ ವಿಡಿಯೋ ವೈರಲ್ ಆದ ಬಳಿಕ ಸತೀಶ್ ವಿರುದ್ಧ ದೂರು ದಾಖಲಾಗಿತ್ತು. ಪ್ರಕರಣದ ಆರೋಪಿ ಇನ್ನೂ ಪೊಲೀಸರ ಕೈಗೆ ಸಿಗದಿರುವ ನಡುವೆಯೇ, ಆತನೊಂದಿಗೆ ಸಂಪರ್ಕದಲ್ಲಿದ್ದ ಪೊಲೀಸ್ ಪೇದೆಯ ವಿರುದ್ಧ ಕ್ರಮ ಕೈಗೊಂಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.




