
ಮೂಡಿಗೆರೆ: ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ದಾಸರಹಳ್ಳಿ ಗ್ರಾಮದಲ್ಲಿ ಕಳೆದ ಮೂರು ವರ್ಷಗಳಿಂದ ಕಲುಷಿತಗೊಂಡ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು. ತಕ್ಷಣವೇ ಶಾಶ್ವತ ಪರಿಹಾರ ಕಲ್ಪಿಸದಿದ್ದರೆ ಗ್ರಾಮ ಪಂಚಾಯಿತಿ ಕಚೇರಿಯ ಎದುರು ಖಾಲಿ ಕೊಡ ಹಿಡಿದು ಉಗ್ರ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಗ್ರಾಮದ ಮತ್ತಿಕಟ್ಟೆ ಭಾಗದಿಂದ ಹರಿದು ಬರುವ ಹಳ್ಳದ ನೀರು ನೇರವಾಗಿ ಕುಡಿಯುವ ನೀರಿನ ಬಾವಿಗೆ ಸೇರುತ್ತಿದ್ದು, ಸೂಕ್ತ ಶುದ್ಧೀಕರಣ ವ್ಯವಸ್ಥೆ ಇಲ್ಲದೆ ಇದೇ ನೀರನ್ನು ನಲ್ಲಿಗಳ ಮೂಲಕ ಮನೆಗಳಿಗೆ ಪೂರೈಸಲಾಗುತ್ತಿದೆ. ಮಳೆಗಾಲದಲ್ಲಿ ಈ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುತ್ತಿದ್ದು, ತೋಟಗಳಿಗೆ ಸಿಂಪಡಿಸುವ ಕ್ರಿಮಿನಾಶಕಗಳು ಮತ್ತು ರಾಸಾಯನಿಕಗಳು ಬಾವಿಗೆ ಸೇರಿ ನಲ್ಲಿ ನೀರಿನಲ್ಲಿ ಹುಳುಗಳು ತೇಲಿಬರುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಈ ಕಲುಷಿತ ನೀರು ಬಳಸುವುದರಿಂದ ಗ್ರಾಮದಲ್ಲಿ ಕಾಲರಾ, ಭೇದಿ ಹಾಗೂ ಟೈಫಾಯಿಡ್ನಂತಹ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದ್ದು, ಗ್ರಾಮ ಪಂಚಾಯಿತಿ ಕಚೇರಿ ಅತ್ಯಂತ ಸಮೀಪದಲ್ಲಿದ್ದರೂ ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ಮುಂದಾಗಿಲ್ಲ. “ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಅಧಿಕಾರಿಗಳಿಗೆ, ಸ್ಥಳೀಯ ಪಂಚಾಯಿತಿ ಸದಸ್ಯರಿಗೆ ಹಾಗೂ ಶಾಸಕರಿಗೆ ಮನವಿ ಸಲ್ಲಿಸುತ್ತಾ ಬಂದಿದ್ದೇವೆ. ಆದರೆ, ಈವರೆಗೆ ಯಾವುದೇ ಶಾಶ್ವತ ಪರಿಹಾರ ಸಿಕ್ಕಿಲ್ಲ” ಎಂದು ಸ್ಥಳೀಯ ಗ್ರಾಮಸ್ಥ ಪ್ರದೀಪ್ ತಿಳಿಸಿದ್ದಾರೆ. ಸರ್ಕಾರ ಶುದ್ಧ ಕುಡಿಯುವ ನೀರಿನ ಯೋಜನೆಗಳಿಗಾಗಿ ಕೋಟ್ಯಂತರ ರೂಪಾಯಿ ಹಣ ವೆಚ್ಚ ಮಾಡುತ್ತಿದ್ದರೂ, ದಾಸರಹಳ್ಳಿಯ ಜನರಿಗೆ ಕಲುಷಿತ ನೀರೇ ಗತಿಯಾಗಿದ್ದು, ತಕ್ಷಣವೇ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಶಾಶ್ವತ ಪರಿಹಾರ ಒದಗಿಸಬೇಕು, ಇಲ್ಲವಾದಲ್ಲಿ ಮಹಿಳೆಯರು ಹಾಗೂ ಸಾರ್ವಜನಿಕರು ಖಾಲಿ ಕೊಡಗಳ ಜೊತೆಗೆ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಲಿದ್ದೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ವರದಿ: ಸಂತೋಷ್ ಅತ್ತಿಗೆರೆ




