
ಬೆಂಗಳೂರು: ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ವಿಕಾಸಸೌಧದ ಗೇಟ್ ಬಳಿ ಭಾರಿ ಹೈಡ್ರಾಮಾ ನಡೆದಿದೆ. ವಿಧಾನಸೌಧದ ಒಳಗೆ ಪ್ರವೇಶಿಸಲು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಹರಸಾಹಸಪಟ್ಟರು. ಈ ವೇಳೆ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ ಹಾಗೂ ರವಿಕುಮಾರ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಳಿಕ ವಶಕ್ಕೆ ಪಡೆದ ಬಿಜೆಪಿ ನಾಯಕರನ್ನು ಪೊಲೀಸರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕರೆದೊಯ್ದರು.




