
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಎರಡು ಕಂತುಗಳ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡಲು ನಿರ್ದೇಶನ ನೀಡುವಂತೆ ಕೋರಿ ಬೆಂಗಳೂರಿನ ಕಮಲಾನಗರದ ಆರ್. ಗಂಗಾ ಹಾಗೂ ನಂದಿನಿ ಲೇಔಟ್ನ ಜಿ.ಡಿ. ಪವಿತ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ಡಾ. ಕೆ ಮನ್ಮಥ ರಾವ್ ಮತ್ತು ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠವು ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಹಣಕಾಸು ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ತುರ್ತು ನೋಟಿಸ್ ನೀಡಿದ್ದು, ವಿಚಾರಣೆಯನ್ನು ಮುಂದೂಡಿದೆ. 2024ರ ಏಪ್ರಿಲ್ನಿಂದ 2025ರ ಜನವರಿವರೆಗೆ ಯಾವುದೇ ಅಡಚಣೆಯಿಲ್ಲದೆ ಸಾಗುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಧನಸಹಾಯ ವಿತರಣೆ, ಆಡಳಿತಾತ್ಮಕ ಬದಲಾವಣೆ ಮತ್ತು ತಾಂತ್ರಿಕ ಗೊಂದಲಗಳ ಹಿನ್ನೆಲೆಯಲ್ಲಿ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಕಂತುಗಳು ಫಲಾನುಭವಿಗಳ ಖಾತೆಗೆ ಜಮೆಯಾಗದೆ ಬಾಕಿ ಉಳಿದಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಸುಮಾರು ₹5,000 ಕೋಟಿ ಸಾರ್ವಜನಿಕ ಹಣ ಲ್ಯಾಪ್ಸ್ ಆಗಿರುವುದಾಗಿ ಕೂಡ ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಅರ್ಜಿದಾರರ ಪರ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ ವಾದ ಮಂಡಿಸಿದ್ದು, ಬಾಕಿ ಇರುವ ಎರಡು ತಿಂಗಳ ಹಣವನ್ನು ಕೂಡಲೇ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಗೃಹಲಕ್ಷ್ಮಿ ಹಣ ವಿತರಣೆಯಲ್ಲಿ ಉಂಟಾದ ವಿಳಂಬಕ್ಕೆ ಹಣಕಾಸಿನ ಕೊರತೆ ಕಾರಣವಲ್ಲ, ತಾಂತ್ರಿಕ ಅಡಚಣೆಗಳು ಹಾಗೂ ಚುನಾವಣಾ ಪ್ರಕ್ರಿಯೆಗಳ ನಡುವಿನ ಆಡಳಿತಾತ್ಮಕ ಬದಲಾವಣೆಗಳೇ ಕಾರಣವಾಗಿದ್ದು, ಮಾರ್ಚ್ ತಿಂಗಳ ಬಾಕಿ ಕಂತು ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮೆಯಾಗಲಿದ್ದು, ಏಪ್ರಿಲ್ ತಿಂಗಳ ಕಂತನ್ನೂ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.




