
ರಾಮನಗರ: ಬಿಡದಿ ಟೌನ್ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆ ಎರಡನೇ ದಿನವೂ ಮುಂದುವರಿದಿದೆ. ಈ ವೇಳೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪಾದಯಾತ್ರೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಜೆಡಿಎಸ್ನ ಪಾದಯಾತ್ರೆಯನ್ನು ಕಾಂಗ್ರೆಸ್ ನಾಯಕರು ‘ಪ್ರಾಯಶ್ಚಿತ್ತ ಯಾತ್ರೆ’ ಎಂದು ಟೀಕಿಸುತ್ತಿರುವುದಕ್ಕೆ ತಿರುಗೇಟು ನೀಡಿದ ದೇವೇಗೌಡರು, ಯಾರಿಗೆ ಪ್ರಾಯಶ್ಚಿತ್ತ ಆಗುತ್ತದೆ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಿ ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರದ ನಡವಳಿಕೆಯಿಂದ ಮುಂಬರುವ ದಿನಗಳಲ್ಲಿ ಯಾರಿಗೆ ಹಾನಿಯಾಗಲಿದೆ ಎಂಬುದಕ್ಕೆ ಕಾಲವೇ ಉತ್ತರ ನೀಡಲಿದೆ ಎಂದು ಅವರು ಅಭಿಪ್ರಾಯಪಟ್ಟರು. ತಾವು ರೈತನ ಮಗನಾಗಿ ಹುಟ್ಟಿದ್ದು, ತಮ್ಮ ಜೀವನದುದ್ದಕ್ಕೂ ರೈತರ ಪರವಾಗಿ ಹೋರಾಟ ನಡೆಸಿಕೊಂಡು ಬಂದಿದ್ದೇನೆ ಎಂದು ಹೇಳಿದ ದೇವೇಗೌಡರು, ದೇಹಕ್ಕೆ ವಯಸ್ಸಾಗಿದೆ, ಆದರೆ ಬುದ್ಧಿಗೆ ವಯಸ್ಸಾಗಿಲ್ಲ ಎಂದು ಹೇಳಿದರು. ವ್ಹೀಲ್ಚೇರ್ನಲ್ಲಾದರೂ ಸರಿ, ರೈತರ ನ್ಯಾಯಕ್ಕಾಗಿ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇನೆ ಎಂದು ದೇವೇಗೌಡರು ಸ್ಪಷ್ಟಪಡಿಸಿದರು. ಬಿಡದಿ ಟೌನ್ಶಿಪ್ ಯೋಜನೆ ವಿಚಾರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಹೋರಾಟ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.




