ಕೊಪ್ಪ: ತಾಲೂಕಿನ ಹರಿಹರಪುರ ಹೋಬಳಿಯಲ್ಲಿ ₹30 ಕೋಟಿಗೂ ಅಧಿಕ ಅನುದಾನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಅವರು ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ, ಹಲವು ಕಾಮಗಾರಿಗಳನ್ನು ಉದ್ಘಾಟಿಸಿದರು. ಕಮ್ಮರಡಿಯಲ್ಲಿ ಸುಮಾರು ₹22 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ವಸತಿ ಶಾಲೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಕಮ್ಮರಡಿಯಲ್ಲಿ ₹1.80 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಬಿ.ಸಿ.ಎಂ. ಹಾಸ್ಟೆಲ್ ಅನ್ನು ಉದ್ಘಾಟಿಸಿದರು. ಹಾಲ್ಮುತ್ತೂರಿನ ಕುರುಕಬಳ್ಳಿ ಸೇತುವೆ ನಿರ್ಮಾಣಕ್ಕೆ ₹50 ಲಕ್ಷ ಅನುದಾನ ಮೀಸಲಿಟ್ಟು ಗುದ್ದಲಿ ಪೂಜೆ ನೆರವೇರಿಸಿದರು. ನಂತರ ₹20 ಲಕ್ಷ ವೆಚ್ಚದಲ್ಲಿ ಅಂಬಳಿಕೆ ರಸ್ತೆ ನಿರ್ಮಾಣ, ಹರಿಹರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಬೈಲ್ ರಸ್ತೆ ನಿರ್ಮಾಣಕ್ಕೆ ₹20 ಲಕ್ಷ ಹಾಗೂ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿ.ಟಿ. ಶ್ರೀನಿವಾಸ್ ಗೌಡರು ಸೇರಿದಂತೆ ಇತರರ ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ₹20 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಜಿಕಟ್ಟೆಯಲ್ಲಿ ₹25 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಅಂಬಲಿ ಸೇತುವೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಟಿ.ಡಿ. ರಾಜೇಗೌಡ ಅವರು, ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲೂ ಶಕ್ತಿಮೀರಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಶೃಂಗೇರಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ಕ್ಷೇತ್ರದ ಜನರ ಸಹಕಾರ ಅಗತ್ಯವಾಗಿದೆ. ಇಂದು ಗುದ್ದಲಿ ಪೂಜೆ ನೆರವೇರಿಸಿರುವ ವಿವಿಧ ಕಾಮಗಾರಿಗಳಿಗೆ ನಿಗದಿಪಡಿಸಿರುವ ಅನುದಾನ ಕಡಿಮೆಯಾದಲ್ಲಿ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಹರಿಹರಪುರ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಮಿತ್ರ, ಸುನಿಲ್ ಭಂಡಿಗಡಿ, ಸಮರ್ಥ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
