
ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ಕಾರ್ಕಳ ತಾಲೂಕು ವತಿಯಿಂದ ಶೌರ್ಯ ವಿಪತ್ತು ನಿರ್ವಹಣಾ ಸ್ವಯಂಸೇವಕರಿಗಾಗಿ ದುರ್ಗಾಪರಮೇಶ್ವರಿ ದೇವಸ್ಥಾನ, ಹಿರಿಯಂಗಡಿಯಲ್ಲಿ ತರಬೇತಿ ಕಾರ್ಯಗಾರ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮೊಕ್ತೆಸರ ಗಿರೀಶ್ ರಾವ್ ವಹಿಸಿದ್ದರು. ಕಾರ್ಕಳ ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಸಂದೀಪ್ ಜಿ.ಎಸ್. ಕಾರ್ಯಕ್ರಮ ಉದ್ಘಾಟಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸೇವೆಯನ್ನು ಶ್ಲಾಘಿಸಿ, ಘಟಕಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಇದೇ ವೇಳೆ ಇತ್ತೀಚೆಗೆ ಹೆಚ್ಚುತ್ತಿರುವ ಸೈಬರ್ ಅಪರಾಧ, ಸಂಚಾರ ನಿಯಮ ಉಲ್ಲಂಘನೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಇನ್ಸ್ಪೆಕ್ಟರ್ ಶಾಂತಿಲಾಲ್ ಜಟಿಯ ಮಾತನಾಡಿ, ವಿಪತ್ತು ಸಂದರ್ಭದಲ್ಲಿ ಪರಸ್ಪರ ಸಹಕಾರದ ಮನೋಭಾವ ಅತ್ಯಗತ್ಯವಾಗಿದ್ದು, ಶೌರ್ಯ ವಿಪತ್ತು ನಿರ್ವಹಣಾ ತಂಡ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗೆ ಉತ್ತಮ ಸಹಕಾರ ನೀಡುತ್ತಿದ್ದು, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಬ್ ಇನ್ಸ್ಪೆಕ್ಟರ್ ಸುಭಾಸ್ ಸಿಂಧೆ ಅವರು ವಿಪತ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ರಕ್ಷಣಾ ಕ್ರಮಗಳು, ನೀರಿನಲ್ಲಿ ಮುಳುಗಿದವರನ್ನು ರಕ್ಷಿಸುವ ವಿಧಾನ, ಕೃತಕ ಉಸಿರಾಟ (ಸಿಪಿಆರ್) ಸೇರಿದಂತೆ ತುರ್ತು ಪರಿಸ್ಥಿತಿಗಳಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಾರ್ಕಳ ಅಧ್ಯಕ್ಷ ವೃಷಭರಾಜು ಕಡಂಬ, ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿ ಜೈವಂತ್ ಪಟಾಗರ್, ಮಾಜಿ ಪುರಸಭಾ ಸದಸ್ಯ ಪ್ರಕಾಶ್ ರಾವ್, ಉಡುಪಿ ಪ್ರಾದೇಶಿಕ ಕಚೇರಿಯ ಜನಜಾಗೃತಿ ವಿಭಾಗದ ಯೋಜನಾಧಿಕಾರಿ ಗಣೇಶ್, ಕಾರ್ಕಳ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಮಾಸ್ಟರ್ ಸದಾನಂದ ಸಾಲಿಯಾನ್ ಹಾಗೂ ಕಾರ್ಕಳ ತಾಲೂಕಿನ ಯೋಜನಾಧಿಕಾರಿ ಬಾಲಕೃಷ್ಣ ಹಿರಿಂಜ ಉಪಸ್ಥಿತರಿದ್ದರು. ಸುಮಾರು 80 ಮಂದಿ ಸ್ವಯಂಸೇವಕರು ತರಬೇತಿಯಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಂಡರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತಾ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಿರಿಂಜ ಸ್ವಾಗತಿಸಿ, ಜನಜಾಗೃತಿ ಯೋಜನಾಧಿಕಾರಿ ಗಣೇಶ್ ವಂದಿಸಿದರು.
ವರದಿ: ಅರುಣ್ ಭಟ್ ಕಾರ್ಕಳ




